ಹೊಸನಗರ:ಅಡಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿದ ಪರಿಣಾಮ ಕೂಲಿ ಕಾರ್ಮಿಕರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಆಘಾತಕಾರಿ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ತ್ರಿಣಿವೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮಂಡ್ರಳ್ಳಿ ಎಂಬಲ್ಲಿ ನಡೆದಿದೆ.
ಮಂಡಳ್ಳಿ ಗ್ರಾಮದ ಉಡುಪ ಎಂಬುವವರ ಅಡಕೆ ತೋಟದಲ್ಲಿ ಶುಕ್ರವಾರ ಕೆಲಸ ನಡೆಯುತ್ತಿತ್ತು. ಕೂಲಿ ಕಾರ್ಮಿಕ ಪುಟ್ಟಸ್ವಾಮಿ (48) ಅವರು ಅಡಕೆ ಗೊನೆ ಕೊಯ್ಯುತ್ತಿದ್ದಾಗ, ಅವರು ಬಳಸುತ್ತಿದ್ದ ದೋಟಿ ಆಕಸ್ಮಿಕವಾಗಿ ಮೇಲೆ ಹಾದುಹೋಗಿ ವಿದ್ಯುತ್ ತಂತಿಗೆ ಸ್ಪರ್ಶಿಸಿದೆ. ತಕ್ಷಣವೇ ದೋಟಿಯ ಮೂಲಕ ವಿದ್ಯುತ್ ಪ್ರವಹಿಸಿ ಪುಟ್ಟಸ್ವಾಮಿ ಸ್ಥಳದಲ್ಲಿಯೇ ಪ್ರಾಣ ಬಿಟ್ಟಿದ್ದಾರೆ.
ಇದೇ ವೇಳೆ ತೋಟದಲ್ಲಿದ್ದ ಮತ್ತೊಬ್ಬ ವ್ಯಕ್ತಿಗೂ ವಿದ್ಯುತ್ ಶಾಕ್ ತಗುಲಿದೆ. ಅವರ ಸ್ಥಿತಿ ಚಿಂತಾಜನಕವಾಗಿದ್ದು, ಪ್ರಾಥಮಿಕ ಚಿಕಿತ್ಸೆಯ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗನ್ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಸದ್ಯ ಗಾಯಾಳು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ ಎಂದು ವಿಷಯ ತಿಳಿದುಬಂದಿದೆ.
ಶವಗಾರಕ್ಕೆ ಸಚಿವ ಮಧು ಬಂಗಾರಪ್ಪ & ಶಾಸಕ ಗೋಪಾಲಕೃಷ್ಣ ಬೇಳೂರು ಭೇಟಿ:
ಘಟನೆಯ ತಿಳಿಯುತ್ತಿದ್ದಂತೆಯೇ ಸಚಿವ ಮಧು ಬಂಗಾರಪ್ಪ ಹಾಗೂ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಹೊಸನಗರ ತಾಲೂಕು ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ಭೇಟಿ ನೀಡಿದರು. ಮೃತ ಪುಟ್ಟಸ್ವಾಮಿ ಅವರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಅವರು, ಅಧಿಕಾರಿಗಳಿಂದ ಘಟನೆಯ ಸಂಪೂರ್ಣ ಮಾಹಿತಿ ಪಡೆದುಕೊಂಡರು.

ಪರಿಹಾರಕ್ಕೆ ಸೂಚನೆ: ಅವಘಡದ ಬಗ್ಗೆ
ಅತೀವ ಸಂಕಟ ವ್ಯಕ್ತಪಡಿಸಿದ ಸಚಿವ ಮಧು ಬಂಗಾರಪ್ಪ, ಮೃತ ಕಾರ್ಮಿಕನ ಕುಟುಂಬಕ್ಕೆ ಸರ್ಕಾರದಿಂದ ಸೂಕ್ತ ಪರಿಹಾರ ಒದಗಿಸುವಂತೆ ಅಧಿಕಾರಿಗಳಿಗೆ ಸ್ಥಳದಲ್ಲೇ ಸೂಚನೆ ನೀಡಿದರು.
ಅಲ್ಲದೆ, ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುವಿಗೆ ಉತ್ತಮ ವೈದ್ಯಕೀಯ ಸೇವೆ ನೀಡಬೇಕು ಎಂದು ಅವರು ವೈದ್ಯಾಧಿಕಾರಿಗಳಿಗೆ ತಾಕೀತು ಮಾಡಿದರು.
ನಿರಂತರ ಸುದ್ದಿಗಾಗಿ ನಮ್ಮ ಅಮಿತ್ ಟೈಮ್ಸ್ ವಾಟ್ಸಪ್ ಗ್ರೂಪ್ ಅನ್ನು ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ:https://chat.whatsapp.com/IY9pAkaWjY80mynFTlPYHJ









