✒️..ಅಮಿತ್ ಆರ್ ಆನಂದಪುರ
ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಐಗಿನ ಬೈಲು ಗ್ರಾಮದ ತಿರುವಿನಲ್ಲಿ ನರ್ಸರಿ ಮುಂಭಾಗ ಅಡಿಕೆ ಸಸಿ ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಇಂದು ಮಧ್ಯಾಹ್ನ ನಡೆದಿದೆ.
ಉಳ್ಳೂರು ಸಮೀಪದ ಕಾಸ್ಪಡಿ ಇಂದ ಆನಂದಪುರ ಮಾರ್ಗವಾಗಿ ಮಾಸೂರಿನತ್ತ ಅಡಿಕೆ ಸಸಿಗಳನ್ನು ಹೊತ್ತೊಯ್ಯುತ್ತಿದ್ದ ಲಾರಿ ಐಗಿನ ಬೈಲು ತಿರುವಿನಲ್ಲಿ ಅಕಸ್ಮಾತ್ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿದೆ.
ಅಪಘಾತದಲ್ಲಿ ಚಾಲಕ ಸೇರಿದಂತೆ ಒಟ್ಟು 6 ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಧಾವಿಸಿದ ಶಾಸಕ:
ಶಾಸಕ ಗೋಪಾಲಕೃಷ್ಣ ಬೇಳೂರು ಇದೇ ವೇಳೆ ಅದೇ ರಸ್ತೆಯಲ್ಲಿ ಸಂಚರಿಸುತ್ತಿದ್ದು ತಕ್ಷಣ ಅಪಘಾತವನ್ನು ಗಮನಿಸಿ ಸ್ಥಳಕ್ಕೆ ಧಾವಿಸಿ ಮಾಹಿತಿ ಪಡೆದರು. ಗಾಯಾಳುಗಳ ಆರೋಗ್ಯ ಸ್ಥಿತಿಯ ಕುರಿತು ವಿಚಾರಿಸಿದರು.
ಪೊಲೀಸರಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿ ನಂತರ ಪಲ್ಟಿಯಾದ ಲಾರಿಯನ್ನು ತೆರವುಗೊಳಿಸಿ ರಸ್ತೆ ಸಂಚಾರಕ್ಕೆ ಅಡಚಣೆ ಆಗದಂತೆ ನೋಡಿಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
















