
✒️..ಅಮಿತ್ ಆರ್ ಆನಂದಪುರ
ಅನಂದಪುರ: ಪಾರಂಪರಿಕವಾಗಿ ಅರಣ್ಯ ಪ್ರದೇಶಗಳಲ್ಲಿ ಬದುಕನ್ನು ಕಟ್ಟಿಕೊಂಡಿರುವ ಜನರಿಗೆ ಸೂಕ್ತ ದಾಖಲೆಗಳಿದ್ದಲ್ಲಿ ಸರ್ಕಾರದಿಂದ ಹಕ್ಕುಪತ್ರಗಳನ್ನು ನೀಡಲಾಗುತ್ತದೆ ಎಂದು ತಹಸಿಲ್ದಾರ್ ಪ್ರದೀಪ್ ನಿಕಲ್ ತಿಳಿಸಿದ್ದಾರೆ.
ನಗರದ ಸಮೀಪದ ಸಿದ್ದೇಶ್ವರ ಕಾಲೋನಿಯ ವಿದ್ಯಾರ್ಥಿ ವಸತಿ ನಿಲಯದಲ್ಲಿ ಅಲೆಮಾರಿ, ಅರೆ ಅಲೆಮಾರಿ, ಸುಡುಗಾಡು ಸಿದ್ಧ ಹಾಗೂ ಶಿಳ್ಳೆಕ್ಯಾತ ಜನಾಂಗದವರಿಗೆ ವಿವಿಧ ಇಲಾಖೆಗಳ ಯೋಜನೆಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸದ್ಯದಲ್ಲಿಯೇ ಗ್ರಾಮಮಟ್ಟದ ಸಮಿತಿಯನ್ನು ರಚಿಸಲಾಗುವುದು. ಈ ಸಮಿತಿ ಅರಣ್ಯ ಪ್ರದೇಶಗಳಲ್ಲಿ ವಾಸಿಸುವ ಜನರನ್ನು ಖುದ್ದಾಗಿ ಭೇಟಿ ಮಾಡಿ ಮಹಜರು ನಡೆಸಿ, ಅಗತ್ಯ ದಾಖಲೆಗಳ ಪರಿಶೀಲನೆ ನಡೆಸಲಿದೆ. ನಂತರ ಸಮಿತಿಯ ವರದಿಯನ್ನು ಆಧರಿಸಿ ಉಪವಿಭಾಗೀಯ ಸಮಿತಿಗೆ ಶಿಫಾರಸು ಮಾಡಲಾಗುತ್ತದೆ. ಅಂತಿಮವಾಗಿ ಜಿಲ್ಲಾ ಮಟ್ಟದ ಸಮಿತಿಯಲ್ಲಿ ತೀರ್ಮಾನ ಕೈಗೊಂಡು ಅರ್ಹರಿಗೆ ಹಕ್ಕುಪತ್ರಗಳನ್ನು ವಿತರಿಸಲಾಗುವುದು ಎಂದು ವಿವರಿಸಿದರು.
ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯಗಳು ತಲುಪಬೇಕು. ಪ್ರತಿಯೊಬ್ಬರೂ ಶಿಕ್ಷಣ ಪಡೆದು ಜಾಗೃತರಾಗಬೇಕು ಹಾಗೂ ತಮ್ಮ ಹಕ್ಕುಗಳನ್ನು ಪಡೆಯಲು ಮುಂದಾಗಬೇಕು ಎಂದು ಕರೆ ನೀಡಿದರು.

ತಾಲೂಕು ಸಮಾಜ ಕಲ್ಯಾಣ ಇಲಾಖೆ ನಿರ್ದೇಶಕರಾದ ಸುರೇಶ ಸಹನೆ ಮಾತನಾಡಿ, ಸರ್ಕಾರದಿಂದ ಅನೇಕ ಸವಲತ್ತುಗಳು ಲಭ್ಯವಿದ್ದು, ಅವುಗಳನ್ನು ಸದ್ಬಳಕೆ ಮಾಡಿಕೊಳ್ಳಲು ಜನರು ಮುಂದಾಗಬೇಕು ಎಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ ಅನಿಲ್, ಉಪ ತಹಸಿಲ್ದಾರ್ ಶಾಂತಮೂರ್ತಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಉಮೇಶ್, ನಾಗರಾಜ್, ಸುಬ್ರಹ್ಮಣ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ನಿರಂತರ ಸುದ್ದಿಗಾಗಿ ನಮ್ಮ ಅಮಿತ್ ಟೈಮ್ಸ್ ವಾಟ್ಸಪ್ ಗ್ರೂಪ್ ಅನ್ನು ಸೇರಲು ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ:https://chat.whatsapp.com/CnYYumPSez6AMYyw8cHG9A?mode=ac_t








