✒️..ಅಮಿತ್ ಆರ್ ಆನಂದಪುರ
ಸಾಗರ(ಆನಂದಪುರ, )ಜು.10: ಯಾವುದೇ ಅರ್ಹ ಮತದಾರರು ಮತದಾರರ ಪಟ್ಟಿಯಿಂದ ವಂಚಿತರಾಗಬಾರದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ಸದಾನಂದ ಸ್ವಾಮಿ ಸಿ. ಹೇಳಿದರು.
ಆನಂದಪುರ ಸಮೀಪದ ಗೌತಮಪುರ ಮಲೆನಾಡು ಪ್ರೌಢಶಾಲೆ ಸಭಾಂಗಣದಲ್ಲಿ ಚುನಾವಣಾ ಆಯೋಗ, ತಾಲೂಕು ಆಡಳಿತ, ಶಾಲಾ ಶಿಕ್ಷಣ ಇಲಾಖೆ ಹಾಗೂ ಗೌತಮಪುರ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಆಯೋಜಿಸಿದ್ದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪ್ರತಿಯೊಬ್ಬ ಮತದಾರರಿಗೂ ತನ್ನದೇ ಆದ ಮಹತ್ವ, ಹಕ್ಕು ಮತ್ತು ಜವಾಬ್ದಾರಿ ಇದೆ. ಆದ್ದರಿಂದ ಪ್ರತಿಯೊಬ್ಬರೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಪ್ರಸ್ತುತ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ನಡೆಯುತ್ತಿದ್ದು, ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಮನೆ ಮನೆಗೆ ಭೇಟಿ ನೀಡಿ ನಮೂನೆಗಳನ್ನು ವಿತರಿಸಿ, ಭರ್ತಿ ಮಾಡಿದ ಅರ್ಜಿಗಳನ್ನು ಸಂಗ್ರಹಿಸಿ ಮಾಹಿತಿಯನ್ನು ಡಿಜಿಟಲೀಕರಣ ಮಾಡುತ್ತಿದ್ದಾರೆ. ಈ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದ್ದು, ವಿದ್ಯಾರ್ಥಿಗಳು ಕೂಡ ಮನೆ ಮನೆಗೆ ತೆರಳಿ ಮತದಾರರ ಜಾಗೃತಿ ಮೂಡಿಸುವಲ್ಲಿ ಸಹಕರಿಸಬೇಕು ಎಂದು ಕರೆ ನೀಡಿದರು.

ಗೌತಮಪುರ ಗ್ರಾಮ ಪಂಚಾಯಿತಿ ಪಿಡಿಒ ಕೃಷ್ಣಪ್ಪ ಮಾತನಾಡಿ, ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯದಲ್ಲಿ ಪ್ರತಿಯೊಬ್ಬ ಮತದಾರರೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಜಾಗೃತಿ ಮೂಡಿಸುವ ಮೂಲಕ ವಿಶೇಷ ಸಮಗ್ರ ಪರಿಷ್ಕರಣೆ ಯಶಸ್ವಿಗೊಳಿಸಬೇಕು. ಪ್ರಜಾಪ್ರಭುತ್ವವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಈ ಕಾರ್ಯದ ಮಹತ್ವವನ್ನು ಜನರಿಗೆ ತಿಳಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಲೆನಾಡು ಪ್ರೌಢಶಾಲೆಯ ಮುಖ್ಯಶಿಕ್ಷಕ ಶೇಖರಪ್ಪ ವಹಿಸಿದ್ದರು. ಶಿಕ್ಷಣ ಸಂಯೋಜಕ ವಿ.ಟಿ. ಸ್ವಾಮಿ, ಸಿಆರ್‌ಪಿ ಭರಮಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಷಣ್ಮುಖಪ್ಪ ಸ್ವಾಗತಿಸಿದರು. ಹರೀಶ್ ಕಾರ್ಯಕ್ರಮ ನಿರೂಪಿಸಿದರು. ರೇಖಾ ವಂದಿಸಿದರು.
ಜಾಹೀರಾತು:












