✒️..ಅಮಿತ್ ಆರ್ ಆನಂದಪುರ
ಸಾಗರ, ಜು. 22: “ಮಕ್ಕಳ ಸುರಕ್ಷತೆ, ಗುಣಮಟ್ಟದ ಶಿಕ್ಷಣ ಹಾಗೂ ಉತ್ತಮ ಭವಿಷ್ಯ ರೂಪಿಸುವ ಜವಾಬ್ದಾರಿ ಪೋಷಕರು, ಶಿಕ್ಷಕರು ಮತ್ತು ಸಮಾಜದ ಪ್ರತಿಯೊಬ್ಬರ ಮೇಲಿದೆ. ಮಕ್ಕಳಿಗೆ ಸುರಕ್ಷಿತ ಹಾಗೂ ಭಯಮುಕ್ತ ವಾತಾವರಣ ಕಲ್ಪಿಸುವ ಮೂಲಕ ಉತ್ತಮ ಸಮಾಜ ನಿರ್ಮಿಸಲು ಸಾಧ್ಯ” ಎಂದು ಆನಂದಪುರ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್‌ಐ) ಪ್ರವೀಣ್ ಹೇಳಿದರು.
ಸಾಗರ ತಾಲ್ಲೂಕಿನ ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯ ಜಂಬಾನಿ ಗ್ರಾಮದಲ್ಲಿ ರಾತ್ರಿ ಗ್ರಾಮ ವಾಸ್ತವ್ಯ ನಡೆಸಿದ ಅವರು, ಮನೆ ಮನೆಗೆ ಭೇಟಿ ನೀಡಿ ಗ್ರಾಮಸ್ಥರ ಕುಂದುಕೊರತೆಗಳನ್ನು ಆಲಿಸಿದರು. ಬಳಿಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಾಸ್ತವ್ಯ ಹೂಡಿ, ಮರುದಿನ ಬೆಳಿಗ್ಗೆ ಶಾಲಾ ಆವರಣದಲ್ಲಿ ಆನಂದಪುರ ಪೊಲೀಸ್ ಠಾಣೆ, ಬರೂರು ಗ್ರಾಮ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಂಯುಕ್ತವಾಗಿ ಆಯೋಜಿಸಿದ್ದ ‘ಮಿಷನ್ ಸುರಕ್ಷಾ’ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಪೋಷಕರು, ಶಿಕ್ಷಕರು ಹಾಗೂ ಸಮಾಜದ ಪ್ರತಿಯೊಬ್ಬರೂ ಜಾಗೃತರಾಗಿರಬೇಕು. 18 ವರ್ಷದೊಳಗಿನ ಮಕ್ಕಳಿಗೆ ಉತ್ತಮ ಶಿಕ್ಷಣ, ಸೂಕ್ತ ಮಾರ್ಗದರ್ಶನ ಹಾಗೂ ಸುರಕ್ಷಿತ ವಾತಾವರಣ ಕಲ್ಪಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಮನೆ, ಶಾಲೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಮಕ್ಕಳಲ್ಲಿ ಆತ್ಮವಿಶ್ವಾಸ, ಉತ್ತಮ ನಡವಳಿಕೆ ಹಾಗೂ ಕಾನೂನಿನ ಅರಿವು ಮೂಡಿಸುವ ಮೂಲಕ ಆರೋಗ್ಯಕರ ಸಮಾಜ ನಿರ್ಮಾಣ ಸಾಧ್ಯ ಎಂದು ಹೇಳಿದರು.
ಪೋಕ್ಸೋ ಕಾಯ್ದೆಯ ಅರಿವು ಅಗತ್ಯ:
“ಪೋಕ್ಸೋ ಕಾಯ್ದೆ ಮಕ್ಕಳ ಹಕ್ಕುಗಳು ಮತ್ತು ಸುರಕ್ಷತೆಯನ್ನು ಕಾಪಾಡುವ ಮಹತ್ವದ ಕಾನೂನಾಗಿದೆ. ಈ ಕಾಯ್ದೆಯ ಬಗ್ಗೆ ಮಕ್ಕಳಿಗೆ ಮಾತ್ರವಲ್ಲದೆ ಪೋಷಕರು, ಶಿಕ್ಷಕರು ಹಾಗೂ ಸಾರ್ವಜನಿಕರಿಗೂ ಸಮರ್ಪಕ ಅರಿವು ಇರಬೇಕು. ಮಕ್ಕಳಲ್ಲಿ ಧೈರ್ಯ ತುಂಬುವ ವಾತಾವರಣ ನಿರ್ಮಿಸಿ, ಯಾವುದೇ ರೀತಿಯ ಕಿರುಕುಳ ಅಥವಾ ದೌರ್ಜನ್ಯದ ಬಗ್ಗೆ ಮುಕ್ತವಾಗಿ ತಿಳಿಸಲು ಪ್ರೋತ್ಸಾಹಿಸಬೇಕು. ಸಮಾಜದಲ್ಲಿ ಜಾಗೃತಿ ಹೆಚ್ಚಿದಷ್ಟೂ ಮಕ್ಕಳ ಮೇಲಿನ ಅಪರಾಧಗಳನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಸಾಧ್ಯ” ಎಂದು ಪಿಎಸ್‌ಐ ಪ್ರವೀಣ್ ತಿಳಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಸದಾನಂದ ಸ್ವಾಮಿ ಸಿ., “ಶಿಕ್ಷಣದಿಂದ ಮಾತ್ರ ಸಮಾಜದಲ್ಲಿ ಶಾಶ್ವತ ಬದಲಾವಣೆ ಸಾಧ್ಯ. ಪ್ರತಿಯೊಬ್ಬ ಅರ್ಹ ಮಗು ಶಾಲೆಯಲ್ಲಿದ್ದು ಗುಣಮಟ್ಟದ ಶಿಕ್ಷಣ ಪಡೆಯಬೇಕು. ಉತ್ತಮ ಶಿಕ್ಷಣದ ಜೊತೆಗೆ ಸಂಸ್ಕಾರ ಹಾಗೂ ಜೀವನ ಮೌಲ್ಯಗಳನ್ನು ಬೆಳೆಸುವ ಜವಾಬ್ದಾರಿ ಪೋಷಕರು ಮತ್ತು ಶಿಕ್ಷಕರ ಮೇಲಿದೆ” ಎಂದು ಹೇಳಿದರು.

ಸರ್ಕಾರಿ ಶಾಲೆಗಳಲ್ಲಿ ಸರ್ಕಾರ ಅಗತ್ಯ ಮೂಲಸೌಲಭ್ಯಗಳನ್ನು ಕಲ್ಪಿಸಿದ್ದು, ಉಚಿತ ಮತ್ತು ಕಡ್ಡಾಯ ಶಿಕ್ಷಣದ ಮೂಲಕ ಪ್ರತಿಯೊಂದು ಮಗುವಿಗೂ ಗುಣಮಟ್ಟದ ಶಿಕ್ಷಣ ದೊರೆಯುವಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ಗ್ರಾಮ ಸುಧಾರಣಾ ಸಮಿತಿಯ ಮುನಿಯಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಾಗರ ಬಿಆರ್‌ಸಿ ಸಮನ್ವಯಾಧಿಕಾರಿ ಡಾ. ಅನ್ನಪೂರ್ಣ, ಬರೂರು ಗ್ರಾಮ ಪಂಚಾಯತ್ ಪಿಡಿಒ ರಾಜು, ಇಸಿಒ ಪಾಲಾಕ್ಷಪ್ಪ, ಎಸ್‌ಡಿಎಂಸಿ ಅಧ್ಯಕ್ಷ ಪರಮೇಶ್ವರಪ್ಪ, ಮುಖ್ಯ ಶಿಕ್ಷಕ ಮಂಜಪ್ಪ, ಸಿಆರ್‌ಪಿ ಮಂಜುಳಾ, ಎಎಸ್‌ಐ ಸಿದ್ದಾರೂಡ, ಸತೀಶ್ ಸೇರಿದಂತೆ ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಜಾಹೀರಾತು












