✒️..ಅಮಿತ್ ಆರ್ ಆನಂದಪುರ
ಸಾಗರ: ಆನಂದಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಲಂದೂರಿನ ಗ್ರಾಮಠಾಣೆ ಜಾಗವನ್ನು ಅಕ್ರಮವಾಗಿ ಕಬಳಿಸುವ ಪ್ರಯತ್ನ ನಡೆಯುತ್ತಿದ್ದು, ಇದರ ಹಿಂದೆ ಕೆಲ ಪ್ರಭಾವಿ ರಾಜಕೀಯ ನಾಯಕರ ಕೈವಾಡವಿದೆ ಎಂದು ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ರತ್ನಾಕರ ಹೊನಗೋಡು ಗಂಭೀರ ಆರೋಪ ಮಾಡಿದರು.
ಮಲಂದೂರಿನಲ್ಲಿ ಗ್ರಾಮಠಾಣೆ ಜಾಗದಲ್ಲಿ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳ ಸ್ಥಳಕ್ಕೆ ಭೇಟಿ ನೀಡಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸರ್ವೇ ನಂ. 148ರಲ್ಲಿ ಆನಂದಪುರ ಗ್ರಾಮ ಪಂಚಾಯಿತಿಗೆ ಸೇರಿದ 11 ಎಕರೆ 17 ಗುಂಟೆ ಗ್ರಾಮಠಾಣೆ ಜಾಗವಿದ್ದು, ಕಳೆದ ಮೂರು-ನಾಲ್ಕು ದಿನಗಳಿಂದ ಅಲ್ಲಿನ ಮರಗಳನ್ನು ಅಕ್ರಮವಾಗಿ ಕಡಿದು ಜಾಗವನ್ನು ಸ್ವಚ್ಛಗೊಳಿಸುವ ಕೆಲಸ ನಡೆಯುತ್ತಿದೆ ಎಂದು ಆರೋಪಿಸಿದರು.
ಈ ಜಾಗವನ್ನು ಹಲವು ವರ್ಷಗಳಿಂದ ವಸತಿ ಸೌಲಭ್ಯವಿಲ್ಲದ ಬಡ ಕುಟುಂಬಗಳಿಗೆ ಹಂಚಿಕೆ ನೀಡುವ ಉದ್ದೇಶದಿಂದ ಗ್ರಾಮ ಪಂಚಾಯಿತಿ ತೀರ್ಮಾನ ಕೈಗೊಂಡಿತ್ತು. ಆದರೆ ಇದೀಗ ಕೆಲವರು ಅದನ್ನು ಅಕ್ರಮವಾಗಿ ತಮ್ಮ ವಶಕ್ಕೆ ಪಡೆಯಲು ಯತ್ನಿಸುತ್ತಿದ್ದಾರೆ ಎಂದು ವಿರೋಧಿಸಿದರು.
ಸಾಗರ ತಾಲೂಕಿನಲ್ಲಿ ಸರ್ಕಾರಿ ಜಾಗಗಳನ್ನು ನಕಲಿ ದಾಖಲೆಗಳ ಮೂಲಕ ಕಬಳಿಸುವ ಒಂದು ಸಂಘಟಿತ ತಂಡ ಕಾರ್ಯನಿರ್ವಹಿಸುತ್ತಿದ್ದು, ಇದೇ ತಂಡ ಮಲಂದೂರಿನ ಜಾಗದ ಮೇಲೂ ಕಣ್ಣಿಟ್ಟಿದೆ ಎಂದು ರತ್ನಾಕರ ಹೊನಗೋಡು ಆರೋಪಿಸಿದರು.

ಈ ಪ್ರಕರಣದ ಬಗ್ಗೆ ತಕ್ಷಣವೇ ಸಮಗ್ರ ತನಿಖೆ ನಡೆಸಿ, ಇದರ ಹಿಂದೆ ಇರುವವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಶಾಸಕರು ಹಾಗೂ ಸಂಬಂಧಿತ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಇಲ್ಲವಾದರೆ ಅವರ ಮೌನವೇ ಅನುಮಾನಗಳಿಗೆ ಕಾರಣವಾಗುತ್ತದೆ ಎಂದು ಅವರು ಎಚ್ಚರಿಸಿದರು.
“ಯಾವುದೇ ಕಾರಣಕ್ಕೂ ಸರ್ಕಾರಿ ಜಾಗವನ್ನು ಅಕ್ರಮವಾಗಿ ಕಬಳಿಸಲು ಬಿಡುವುದಿಲ್ಲ. ಇದರ ವಿರುದ್ಧ ಹೋರಾಟ ನಡೆಸಲಾಗುವುದು” ಎಂದು ರತ್ನಾಕರ ಹೊನಗೋಡು ಎಚ್ಚರಿಕೆ ನೀಡಿದರು.
ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮೋಹನ್ ಮಾತನಾಡಿ, ಸಾರ್ವಜನಿಕರ ಬಳಕೆಗೆ ಇರುವ ಈ ಜಾಗವನ್ನು ಕಬಳಿಸುವ ಯತ್ನದ ಹಿಂದೆ ಕೆಲ ಪ್ರಭಾವಿ ವ್ಯಕ್ತಿಗಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಯಾವುದೇ ಕಾರಣಕ್ಕೂ ಅಕ್ರಮ ಜಾಗ ಕಬಳಿಕೆಯನ್ನು ಸಹಿಸಲಾಗುವುದಿಲ್ಲ ಎಂದು ಹೇಳಿದರು.

ದಲಿತ ಸಂಘರ್ಷ ಸಮಿತಿ ತಾಲೂಕು ಸಂಚಾಲಕ ರೇವಪ್ಪ ಹೊಸಕೊಪ್ಪ ಮಾತನಾಡಿ, ಇಂತಹ ಬೆಲೆಬಾಳುವ ಸರ್ಕಾರಿ ಜಾಗವನ್ನು ಏಕಪಕ್ಷೀಯವಾಗಿ ಕಬಳಿಸಲು ಯತ್ನಿಸುತ್ತಿರುವವರ ವಿರುದ್ಧ ಅಧಿಕಾರಿಗಳು ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಶಕ್ತಿ ಕೇಂದ್ರ ಅಧ್ಯಕ್ಷ ಶಾಂತಪ್ಪ ಗೌಡ್ರು, ಮಾಜಿ ಗ್ರಾಪಂ ಅಧ್ಯಕ್ಷ ಗುರುರಾಜ್, ರವೀಂದ್ರ ಗೌಡ್ರು, ನಾಗರಾಜ್, ಬಸವರಾಜ್ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.













