ಶಿವಮೊಗ್ಗ:
ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹಾಗೂ ಲೋಕಸಭಾ ಸದಸ್ಯ ಬಿ.ವೈ. ರಾಘವೇಂದ್ರ ಅವರು ಪ್ರಗತಿ ಪರಿಶೀಲನೆ ನಡೆಸಿ, ಶೀಘ್ರವೇ ಸಮಸ್ಯೆಗಳನ್ನು ಬಗೆಹರಿಸಬೇಕು. ಜೊತೆಗೆ ಸಂತ್ರಸ್ತರ ಡಿ-ನೋಟಿಫಿಕೇಷನ್ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಲು ಕ್ರಮ ಕೈಗೊಳ್ಳಬೇಕು ಎಂದು ಮಲೆನಾಡು ರೈತ ಹೋರಾಟ ಸಮಿತಿ ಸಂಚಾಲಕ ತೀ.ನಾ. ಶ್ರೀನಿವಾಸ್ ಒತ್ತಾಯಿಸಿದರು.
ನಗರದ ಪತ್ರಿಕಾ ಭವನದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ ಬಗೆಹರಿಸಲು ನಾವೇ ಪ್ರಯತ್ನಪಟ್ಟಿದ್ದೇವೆ ಎಂದು ಸಚಿವ ಮಧು ಬಂಗಾರಪ್ಪ ಹಾಗೂ ಸಂಸದ ಬಿ.ವೈ. ರಾಘವೇಂದ್ರ ಅವರು ಹಲವು ಬಾರಿ ಪರಸ್ಪರ ಮಾತಿನ ಕದನ ನಡೆಸಿದ್ದಾರೆ. ಆದರೆ ಈ ಸಮಸ್ಯೆ ಬಗೆಹರಿಸುವ ಸಂಬಂಧ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿ ಹಾಗೂ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ಯಾವ ಕ್ರಮ ಕೈಗೊಂಡಿದ್ದಾರೆ ಎಂಬುದನ್ನು ಸರಿಯಾಗಿ ಪರಿಶೀಲಿಸಿಲ್ಲ ಎಂದು ದೂರಿದರು.

ಸುಪ್ರೀಂ ಕೋರ್ಟ್ ಕಳೆದ ವರ್ಷ ಡಿಸೆಂಬರ್‌ನಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಕೇಂದ್ರ ಸರ್ಕಾರದ ಕಾರ್ಯದರ್ಶಿಗಳು ಪರಸ್ಪರ ಚರ್ಚಿಸಿ ಸಮಸ್ಯೆ ಬಗೆಹರಿಸಲು ಪ್ರಯತ್ನಿಸಬೇಕು ಎಂದು ಆದೇಶಿಸಿದೆ. ಅದರಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆದಿದ್ದರೂ, ಜಿಲ್ಲಾಧಿಕಾರಿ ಹಾಗೂ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ಸಮಸ್ಯೆ ಬಗೆಹರಿಸಲು ಗಂಭೀರ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.
ಅರಣ್ಯ ಇಲಾಖೆಯ ಉನ್ನತ ಅಧಿಕಾರಿಗಳನ್ನು ವಿಚಾರಿಸಿದಾಗ, ಜಿಲ್ಲಾಧಿಕಾರಿ ಕಚೇರಿಯಿಂದ ಡಿ-ನೋಟಿಫಿಕೇಷನ್‌ಗೆ ಸಂಬಂಧಿಸಿದ ಯಾವುದೇ ಪ್ರಸ್ತಾವನೆ ಇನ್ನೂ ಬಂದಿಲ್ಲ ಎಂದು ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ವರ್ಷ ಕಳೆದರೂ ಪ್ರಸ್ತಾವನೆ ಕಳುಹಿಸಲು ವಿಳಂಬವಾಗುತ್ತಿರುವುದು ದುರಂತ ಎಂದು ಹೇಳಿದರು.
ಸಂತ್ರಸ್ತರ ಕೈಬಿಟ್ಟಿರುವ ಪ್ರಕರಣಗಳನ್ನು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ. ಆದರೆ ಹಿಂದಿನ ಜಿಲ್ಲಾಧಿಕಾರಿ ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ 8–10 ದಿನಗಳಲ್ಲಿ ಕೇಂದ್ರ ಮಟ್ಟದಲ್ಲಿ ಬಗೆಹರಿಯುತ್ತದೆ ಎಂದು ಹೇಳಿರುವುದು ಸುಳ್ಳಾಗಿದೆ. ಆದ್ದರಿಂದ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಂಸದರು ಕೂಡಲೇ ಪ್ರಗತಿ ಪರಿಶೀಲನೆ ನಡೆಸಿ ವಾಸ್ತವಾಂಶ ತಿಳಿಸಬೇಕು ಎಂದು ಆಗ್ರಹಿಸಿದರು.
ಕೆಪಿಸಿ ಲಿಂಗನಮಕ್ಕಿ ಅಣೆಕಟ್ಟು ನಿರ್ಮಾಣಕ್ಕಾಗಿ ಭೂಸ್ವಾಧೀನ ಮಾಡಿಕೊಂಡ ಸಾವಿರಾರು ಎಕರೆ ಭೂಮಿಯನ್ನು ಇನ್ನೂ ಅಣೆಕಟ್ಟು ಅಥವಾ ಯೋಜನೆಗಾಗಿ ಬಳಸಿಲ್ಲ. ಆ ಪ್ರದೇಶದಲ್ಲಿ ಮುಳುಗಡೆ ಸಂತ್ರಸ್ತರು ಹಾಗೂ ಭೂರಹಿತರು ಸಾಗುವಳಿ ಮಾಡಿಕೊಂಡು ಬಂದಿದ್ದಾರೆ. ಕರ್ನಾಟಕ ಭೂಸ್ವಾಧೀನ ಕಾಯ್ದೆಯ ಪ್ರಕಾರ, ಸರ್ಕಾರ ಯಾವುದೇ ಉದ್ದೇಶಕ್ಕಾಗಿ ಭೂಸ್ವಾಧೀನ ಮಾಡಿಕೊಂಡರೆ ಐದು ವರ್ಷದೊಳಗೆ ಅದನ್ನು ಬಳಸಬೇಕು. ಇಲ್ಲವಾದಲ್ಲಿ ಆ ಭೂಮಿಯನ್ನು ಮೂಲ ಮಾಲೀಕರಿಗೆ ವಾಪಸ್ ನೀಡಬೇಕು ಎಂದು ತಿಳಿಸಿದರು.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರನ್ನು ಭೇಟಿಯಾದಾಗ, ಶಿವಮೊಗ್ಗ ಜಿಲ್ಲಾಧಿಕಾರಿಗಳಿಂದ ಇನ್ನೂ ಯಾವುದೇ ಪ್ರಸ್ತಾವನೆ ಬಂದಿಲ್ಲ. ಪ್ರಸ್ತಾವನೆ ಬಂದ ತಕ್ಷಣ ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಆದರೆ ಜಿಲ್ಲಾಡಳಿತದಿಂದ ಇನ್ನೂ ಯಾವುದೇ ಪ್ರಸ್ತಾವನೆ ರಾಜ್ಯ ಸರ್ಕಾರಕ್ಕೆ ಹೋಗಿಲ್ಲ. ಆದರೂ ಉಸ್ತುವಾರಿ ಸಚಿವರು ಹಾಗೂ ಸಂಸದರು ತಮ್ಮದೇ ಸಾಧನೆ ಎಂದು ಹೇಳಿಕೊಳ್ಳುತ್ತಿದ್ದಾರೆ ಎಂದು ಟೀಕಿಸಿದರು.
ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ ಕುರಿತು ಸರ್ಕಾರ ಗಂಭೀರ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಅಶೋಕ್ ಜಂಬಳ್ಳಿ, ಚಕ್ರಪಾಣಿ ಬಿ.ಎಲ್. ಕೊಡಸರ, ಸುಗಂದರಾಜ ಜೈನ್, ಮಂಜಪ್ಪ ಆರನಬೈಲು, ಮಂಜುನಾಥ್, ಅಶೋಕ್ ಬೇಸೂರು, ಕೃಷ್ಣಪ್ಪ, ವಸಂತ, ಸರ್ವೋತ್ತಮ, ಕೌಶಿಕ್ ಮೊದಲಾದವರು ಉಪಸ್ಥಿತರಿದ್ದರು.
✒️…ಅಮಿತ್ ಆರ್ ಆನಂದಪುರ
ನಿರಂತರ ಸುದ್ದಿಗಾಗಿ ನಮ್ಮ ಅಮಿತ್ ಟೈಮ್ಸ್ ವಾಟ್ಸಪ್ ಗ್ರೂಪ್ ಅನ್ನು ಸೇರಲು ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ:https://chat.whatsapp.com/IY9pAkaWjY80mynFTlPYHJ









