Home Blog ಶಾಸಕ ಗೋಪಾಲಕೃಷ್ಣ ಬೇಳೂರು ಮುಖ್ಯಮಂತ್ರಿ ಬೇಟಿಯಾಗಿ ಏನು ಮನವಿ ಮಾಡಿದ್ದಾರೆ..?..!!

ಶಾಸಕ ಗೋಪಾಲಕೃಷ್ಣ ಬೇಳೂರು ಮುಖ್ಯಮಂತ್ರಿ ಬೇಟಿಯಾಗಿ ಏನು ಮನವಿ ಮಾಡಿದ್ದಾರೆ..?..!!

95
0

✒️..ಅಮಿತ್ ಆರ್ ಆನಂದಪುರ

ಬೆಂಗಳೂರು/ ಸಾಗರ ತಾಲೂಕಿನ ಬೇಸೂರು ಗ್ರಾಮದಲ್ಲಿ ಕೇಂದ್ರ ಸರ್ಕಾರ ಪ್ರಸ್ತಾಪಿಸಿರುವ ಪರಮಾಣು ವಿದ್ಯುತ್ ಸ್ಥಾವರ ಯೋಜನೆಯನ್ನು ಕೈಬಿಡುವಂತೆ ಶಾಸಕ ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀ ಗೋಪಾಲಕೃಷ್ಣ ಬೇಳೂರು ಅವರು ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆವಿನಹಳ್ಳಿ ಹೋಬಳಿ ವ್ಯಾಪ್ತಿಯ ಬೇಸೂರು ಗ್ರಾಮದಲ್ಲಿ ಪರಮಾಣು ವಿದ್ಯುತ್ ಸ್ಥಾವರ ಸ್ಥಾಪನೆಗಾಗಿ ಸ್ಥಳ ಗುರುತಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಈ ಮನವಿ ಸಲ್ಲಿಸಲಾಗಿದೆ.

ಈ ಪ್ರದೇಶದ ಜನರು ಈ ಹಿಂದೆ ಹಿರೇಭಾಸ್ಕರ ಮತ್ತು ಶರಾವತಿ ಜಲವಿದ್ಯುತ್ ಯೋಜನೆಗಳಿಂದ ಸಂತ್ರಸ್ತರಾಗಿ ತಮ್ಮ ಬದುಕನ್ನು ಮರುಸ್ಥಾಪಿಸಿಕೊಂಡಿದ್ದಾರೆ. ಇಂತಹ ಸಂದರ್ಭದಲ್ಲಿ ಮತ್ತೆ ಹೊಸ ಯೋಜನೆಗಳಿಂದ ಸ್ಥಳೀಯ ಕುಟುಂಬಗಳು ತಮ್ಮ ನೆಲ ಕಳೆದುಕೊಳ್ಳುವ ಅಪಾಯ ಎದುರಿಸಬೇಕಾಗುತ್ತದೆ ಎಂದು ಶಾಸಕರು ಮನವಿಯಲ್ಲಿ ಉಲ್ಲೇಖಿಸಿದ್ದಾರೆ.

ಇದಲ್ಲದೆ, ಈ ಯೋಜನೆಗೆ ಸ್ಥಳೀಯರಿಂದ ತೀವ್ರ ವಿರೋಧ ವ್ಯಕ್ತವಾಗಿದ್ದು, ಈಗಾಗಲೇ ಅನೇಕ ಅಭಿವೃದ್ಧಿ ಯೋಜನೆಗಳಿಗೆ ಭೂಮಿ ನೀಡಿರುವ ಸಾಗರ ಕ್ಷೇತ್ರದಲ್ಲಿ ಮತ್ತೊಮ್ಮೆ ಅಣು ವಿದ್ಯುತ್ ಸ್ಥಾವರ ಸ್ಥಾಪನೆಯಿಂದ ಪಶ್ಚಿಮ ಘಟ್ಟದ ಜೀವವೈವಿಧ್ಯ, ಅರಣ್ಯ ಸಂಪತ್ತು ಮತ್ತು ಪರಿಸರ ಸಮತೋಲನಕ್ಕೆ ಹಾನಿಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.

ಆದ್ದರಿಂದ, ಮಲೆನಾಡಿನ ಪಶ್ಚಿಮ ಘಟ್ಟ ಪ್ರದೇಶಕ್ಕೆ ಮಾರಕವಾಗುವ ಈ ಯೋಜನೆಯನ್ನು ಯಾವುದೇ ಕಾರಣಕ್ಕೂ ಜಾರಿಗೆ ತರಬಾರದು. ಸಾರ್ವಜನಿಕ ಹಾಗೂ ನೈಸರ್ಗಿಕ ಹಿತದೃಷ್ಟಿಯಿಂದ ಪರಮಾಣು ವಿದ್ಯುತ್ ಸ್ಥಾವರ ಸ್ಥಾಪನೆ ಪ್ರಸ್ತಾವವನ್ನು ಸಂಪೂರ್ಣವಾಗಿ ಕೈಬಿಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿದೆ.