ಸಾಗರ: ಆನಂದಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಜನರಿಗೆ 24 ಗಂಟೆಯೂ ಗುಣಮಟ್ಟದ ಆರೋಗ್ಯ ಸೇವೆ ದೊರೆಯುವಂತೆ ಸರ್ಕಾರ ಅಗತ್ಯ ವೈದ್ಯರು ಹಾಗೂ ಸಿಬ್ಬಂದಿಯನ್ನು ನಿಯೋಜಿಸಬೇಕು ಎಂದು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ರತ್ನಾಕರ ಹೊನಗೋಡು ಆಗ್ರಹಿಸಿದರು.
ಆನಂದಪುರದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಯನ್ನು ಪರಿಶೀಲಿಸಿದ ಅವರು, ಆಸ್ಪತ್ರೆಗೆ ಬರುವ ರೋಗಿಗಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಅಧಿಕಾರಿಗಳ ಗಮನ ಸೆಳೆದರು.
ಆಸ್ಪತ್ರೆಗೆ ಮಗುವಿನ ಚಿಕಿತ್ಸೆಗೆ ಬಂದಿದ್ದ ತಂದೆಯೊಬ್ಬರ ಮಗುವನ್ನು ವೈದ್ಯರು ಸ್ವತಃ ಪರೀಕ್ಷಿಸದೆ, ಸಿಬ್ಬಂದಿಗೆ ದೂರವಾಣಿ ಮೂಲಕ ಔಷಧ ನೀಡುವಂತೆ ಸೂಚಿಸಿರುವುದು ಬೇಜವಾಬ್ದಾರಿಯ ನಡೆ ಎಂದು ಅವರು ಆರೋಪಿಸಿದರು.
ಆನಂದಪುರದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡಲು ಸಾಧ್ಯವಾಗದಿದ್ದರೆ, ಆಸ್ಪತ್ರೆಯನ್ನು ಮುಂದುವರಿಸಿ ಸರ್ಕಾರದ ಹಣವನ್ನು ವ್ಯರ್ಥ ಮಾಡುವುದಕ್ಕಿಂತ ಅದನ್ನು ಬಂದ್ ಮಾಡುವುದು ಉತ್ತಮ ಎಂದು ರತ್ನಾಕರ ಹೊನಗೋಡು ಆಕ್ರೋಶ ವ್ಯಕ್ತಪಡಿಸಿದರು.
ದಾಖಲೆಗಳ ಪ್ರಕಾರ ಆಸ್ಪತ್ರೆಯಲ್ಲಿ ಮೂವರು ಎಂ.ಬಿ.ಬಿ.ಎಸ್. ವೈದ್ಯರು ಇದ್ದರೂ, ಕರ್ತವ್ಯಕ್ಕೆ ನಿಯಮಿತವಾಗಿ ಹಾಜರಾಗುತ್ತಿಲ್ಲ. ಇದರಿಂದ ಆನಂದಪುರ ಹಾಗೂ ಸುತ್ತಮುತ್ತಲಿನ ಸಾವಿರಾರು ಬಡ ರೋಗಿಗಳಿಗೆ ತೊಂದರೆಯಾಗುತ್ತಿದೆ ಎಂದು ಹೇಳಿದರು.

ಇದಲ್ಲದೆ, 108 ಆಂಬುಲೆನ್ಸ್ ಸೇವೆಯೂ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ. ಆನಂದಪುರದ ಮೂಲಕ ರಾಷ್ಟ್ರೀಯ ಹೆದ್ದಾರಿ ಹಾದು ಹೋಗುವುದರಿಂದ ಅಪಘಾತಗಳು ಆಗಾಗ ಸಂಭವಿಸುತ್ತಿದ್ದು, ತುರ್ತು ಚಿಕಿತ್ಸೆಗೆ ಆಸ್ಪತ್ರೆಯಲ್ಲಿ 24 ಗಂಟೆಯೂ ವೈದ್ಯಕೀಯ ಸೇವೆ ಲಭ್ಯವಿರುವುದು ಅತ್ಯಗತ್ಯ ಎಂದು ಒತ್ತಾಯಿಸಿದರು.
ಇಲ್ಲಿನ ಪರಿಸ್ಥಿತಿಯನ್ನು ಸಂಬಂಧಪಟ್ಟ ಹಿರಿಯ ಆರೋಗ್ಯ ಅಧಿಕಾರಿಗಳು ಪರಿಶೀಲಿಸಿ, ಒಂದು ವಾರದೊಳಗೆ ಅಗತ್ಯ ವೈದ್ಯರು ಹಾಗೂ ಸಿಬ್ಬಂದಿಯನ್ನು ನೇಮಿಸಿ ಆರೋಗ್ಯ ಸೇವೆಯನ್ನು ಸುಧಾರಿಸಬೇಕು. ಇಲ್ಲವಾದರೆ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಬರುವವರೆಗೆ ಆಸ್ಪತ್ರೆಯ ಮುಂಭಾಗದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ರತ್ನಾಕರ ಹೊನಗೋಡು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಧನರಾಜ್, ಹಿರಣ್ಯಪ್ಪ, ಗುರುರಾಜ್, ಮೋಹನ್ ಕುಮಾರ್, ಪ್ರದೀಪ್ ಕುಮಾರ್, ಪರಮೇಶ್, ಉಮೇಶ್, ಚಂದ್ರು, ರಾಜು ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಜಾಹೀರಾತು












