✒️..ಅಮಿತ್ ಆರ್ ಆನಂದಪುರ
ಸಾಗರ: ಮಾಜಿ ಶಾಸಕ ಹರತಾಳು ಹಾಲಪ್ಪ ಅವರಿಗೆ ನಮ್ಮ ಶಾಸಕರ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಸಂಘ ಪರಿವಾರದವರಿಗೆ ನಮ್ಮ ಶಾಸಕ ಗೋಪಾಲಕೃಷ್ಣ ಬೇಳೂರು ಕರೆ ಮಾಡಿದ್ದರು ಎಂಬುದನ್ನು ಸಾಬೀತುಪಡಿಸಲಿ ಎಂದು ಸಾಗರ ನಗರ ಪ್ರಾಧಿಕಾರದ ಸದಸ್ಯ ಸೋಮಶೇಖರ್ ಲಾವಿಗೆರೆ ಸವಾಲು ಹಾಕಿದರು.
ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಶಾಸಕರ ಬಗ್ಗೆ ಮಾತನಾಡುವಾಗ ಎಚ್ಚರಿಕೆಯಿಂದ ಮಾತನಾಡಬೇಕು. ಸಚಿವ ಸ್ಥಾನ ಸಿಕ್ಕರೆ ಕ್ಷೇತ್ರವನ್ನು ಮತ್ತಷ್ಟು ಅಭಿವೃದ್ಧಿಪಡಿಸಬಹುದು ಎಂಬ ಆಶಯದಿಂದ ಶಾಸಕ ಬೇಳೂರು ಎರಡು ತಿಂಗಳ ಕಾಲ ಬೆಂಗಳೂರಿನಲ್ಲಿದ್ದರು. ಈ ವಿಚಾರವನ್ನು ತಪ್ಪಾಗಿ ಬಿಂಬಿಸುವ ಪ್ರಯತ್ನ ಮಾಡಬಾರದು ಎಂದರು.
ಹರತಾಳು ಹಾಲಪ್ಪ ಅವರು ಸಚಿವರಾಗಿದ್ದ ಸಂದರ್ಭದಲ್ಲಿ ಆರು ತಿಂಗಳು ಯಾವ ಪ್ರಕರಣದಲ್ಲಿ ಸಿಲುಕಿ ಎಲ್ಲಿದ್ದರು ಎಂಬುದನ್ನು ಸಾರ್ವಜನಿಕರಿಗೆ ತಿಳಿಸಲಿ ಎಂದು ಸೋಮಶೇಖರ್ ಪ್ರಶ್ನಿಸಿದರು.

ಆಡಳಿತ ವೈಫಲ್ಯ ಖಂಡಿಸಿ ಬಿಜೆಪಿ ಪ್ರತಿಭಟನೆ ನಡೆಸುವುದನ್ನು ನಾವು ಸ್ವಾಗತಿಸುತ್ತೇವೆ. ಆದರೆ ಹೋರಾಟದ ನೆಪದಲ್ಲಿ ಶಾಸಕರ ತೇಜೋವಧೆ ಮಾಡುವುದನ್ನು ಸಹಿಸುವುದಿಲ್ಲ. ಗ್ರಾಮ ಪಂಚಾಯಿತಿ ಮೀಸಲಾತಿಯಲ್ಲಿ ಶಾಸಕರಾಗಲಿ, ಕಾಂಗ್ರೆಸ್ ಪಕ್ಷವಾಗಲಿ ಯಾವುದೇ ಹಸ್ತಕ್ಷೇಪ ಮಾಡಿಲ್ಲ. ಮೀಸಲಾತಿ ನಿಗದಿಪಡಿಸುವುದು ಚುನಾವಣಾ ಆಯೋಗದ ಜವಾಬ್ದಾರಿಯಾಗಿದೆ ಎಂದು ಸ್ಪಷ್ಟಪಡಿಸಿದರು.
ಮಳೆಮಾಪನಾ ಯಂತ್ರಗಳ ಸಮಸ್ಯೆ ಕುರಿತು ಮಾತನಾಡಿದ ಅವರು, ತಾಲ್ಲೂಕಿನಲ್ಲಿ ಹಾಳಾಗಿದ್ದ ಮಳೆಮಾಪನಾ ಯಂತ್ರಗಳನ್ನು ದುರಸ್ತಿಗೊಳಿಸುವಲ್ಲಿ ಶಾಸಕ ಬೇಳೂರು ವಿಶೇಷ ಆಸಕ್ತಿ ವಹಿಸಿದ್ದಾರೆ. ಶಾಸಕರು ಕಂದಾಯ ಸಚಿವರನ್ನು ಭೇಟಿ ಮಾಡಿ ಮನವಿ ಮಾಡಿದ ಹಿನ್ನೆಲೆಯಲ್ಲಿ 20 ಮಳೆಮಾಪನಾ ಯಂತ್ರಗಳು ಮಂಜೂರಾಗಿ ಗ್ರಾಮಾಂತರ ಪ್ರದೇಶಗಳಲ್ಲಿ ಅಳವಡಿಸಲಾಗಿದೆ. ಇದೀಗ ಬಹುತೇಕ ಮಳೆಮಾಪನಾ ಯಂತ್ರಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿವೆ ಎಂದರು.
ಎಪಿಎಂಸಿ ಮಾಜಿ ಅಧ್ಯಕ್ಷ ಚೇತನರಾಜ್ ಕಣ್ಣೂರು ಮಾತನಾಡಿ, ಗ್ರಾಮ ಪಂಚಾಯಿತಿ ಮೀಸಲಾತಿಯನ್ನು ಗಾಂಧಿ ಮಂದಿರ ಹಾಗೂ ಪ್ರವಾಸಿ ಮಂದಿರದಲ್ಲಿ ಮಾಡಲಾಗಿದೆ ಎಂದು ಆರೋಪಿಸುತ್ತಿರುವ ಬಿಜೆಪಿ ನಾಯಕರು ತಾವು ಅಧಿಕಾರದಲ್ಲಿದ್ದಾಗ ಮೀಸಲಾತಿ ಪ್ರಕ್ರಿಯೆಯನ್ನು ಹೇಗೆ ನಡೆಸಿದ್ದರು ಎಂಬುದನ್ನು ಜನರಿಗೆ ತಿಳಿಸಲಿ. ಕ್ಷೇತ್ರದ ಜನರನ್ನು ತಪ್ಪುದಾರಿಗೆಳೆಯುವ ಪ್ರಯತ್ನವನ್ನು ಕೈಬಿಡಬೇಕು. ಮೀಸಲಾತಿಗೂ ಕಾಂಗ್ರೆಸ್ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದರು.
ಮಾಜಿ ಶಾಸಕ ಹರತಾಳು ಹಾಲಪ್ಪ ಅವರಿಗೆ ‘ಕ್ರೆಡಿಟ್ ಫೋಬಿಯಾ’ ಇದೆ. ಬೇರೆಯವರು ಮಾಡಿದ ಕೆಲಸಕ್ಕೂ ತಾವೇ ಕಾರಣ ಎಂದು ಪ್ರಚಾರ ಪಡೆಯುವ ಮನಸ್ಥಿತಿ ಅವರದ್ದಾಗಿದೆ. ಮಳೆಮಾಪನಾ ಯಂತ್ರಗಳ ದುರಸ್ತಿಗೂ ತಮ್ಮ ಪ್ರತಿಭಟನೆಯೇ ಕಾರಣ ಎಂದು ಹೇಳಿದರೂ ಅಚ್ಚರಿಯಿಲ್ಲ ಎಂದು ವ್ಯಂಗ್ಯವಾಡಿದರು.
ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರಾದ ಗಣಪತಿ ಮಂಡಗಳಲೆ ಉಪಸ್ಥಿತರಿದ್ದರು.
ಜಾಹೀರಾತು












