✒️..ಅಮಿತ್ ಆರ್ ಆನಂದಪುರ
ಸಾಗರ(ಆನಂದಪುರ): ನಮಗೆ ದೊರೆತಿರುವ ಸ್ವಾತಂತ್ರ್ಯವನ್ನು ಸದುಪಯೋಗಪಡಿಸಿಕೊಂಡು, ಸಂವಿಧಾನಾತ್ಮಕ ಹಕ್ಕುಗಳನ್ನು ಅರಿತು ಉತ್ತಮ ಶಿಕ್ಷಣ ಪಡೆಯುವ ಮೂಲಕ ದೇಶದ ಅಭಿವೃದ್ಧಿಗೆ ಪ್ರತಿಯೊಬ್ಬರೂ ಕೊಡುಗೆ ನೀಡಬೇಕು ಎಂದು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ರವಿಶಂಕರ್ ಹೇಳಿದರು.
ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೆರವೇರಿಸಿ, ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸ್ವಾತಂತ್ರ್ಯವು ಅನೇಕ ಮಹನೀಯರ ತ್ಯಾಗ, ಬಲಿದಾನ ಹಾಗೂ ಹೋರಾಟದ ಫಲವಾಗಿದೆ. ಅವರ ತ್ಯಾಗ ಮತ್ತು ಬಲಿದಾನವನ್ನು ಸ್ಮರಿಸುವುದರ ಜೊತೆಗೆ, ಸ್ವಾತಂತ್ರ್ಯದ ಮಹತ್ವವನ್ನು ವಿದ್ಯಾರ್ಥಿಗಳು ಅರಿತುಕೊಂಡು ದೇಶದ ಜವಾಬ್ದಾರಿಯುತ ನಾಗರಿಕರಾಗಿ ರೂಪುಗೊಳ್ಳಬೇಕು ಎಂದು ಹೇಳಿದರು.

ದೇಶದ ಭವಿಷ್ಯವಾಗಿರುವ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು, ತಮ್ಮ ಜ್ಞಾನ ಮತ್ತು ಪ್ರತಿಭೆಯನ್ನು ದೇಶದ ಪ್ರಗತಿಗೆ ಬಳಸಿಕೊಳ್ಳಬೇಕು. ಸ್ವಾತಂತ್ರ್ಯವನ್ನು ಸಮರ್ಪಕವಾಗಿ ಉಳಿಸಿಕೊಂಡು ಮುಂದಿನ ಪೀಳಿಗೆಗೆ ಉತ್ತಮ ರಾಷ್ಟ್ರವನ್ನು ನಿರ್ಮಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ರವಿಶಂಕರ್ ತಿಳಿಸಿದರು.
ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಜಗನ್ನಾಥ್ ಮಾತನಾಡಿ, ವಿದ್ಯಾರ್ಥಿಗಳು ಸ್ವಾತಂತ್ರ್ಯದ ಮಹತ್ವವನ್ನು ಅರಿತು ಶಿಸ್ತು, ದೇಶಪ್ರೇಮ ಹಾಗೂ ಉತ್ತಮ ಮೌಲ್ಯಗಳೊಂದಿಗೆ ವಿದ್ಯಾಭ್ಯಾಸದಲ್ಲಿ ತೊಡಗಬೇಕು ಎಂದರು.
ಅಭಿವೃದ್ಧಿ ಸಮಿತಿ ಸದಸ್ಯರಾದ ಬಿಡಿ ರವಿಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಸಾಮಾಜಿಕ ಜವಾಬ್ದಾರಿ ಮತ್ತು ಉತ್ತಮ ಸಂಸ್ಕಾರಗಳನ್ನು ಬೆಳೆಸಿಕೊಳ್ಳಬೇಕು. ಶಿಕ್ಷಣವೇ ವ್ಯಕ್ತಿಯ ಹಾಗೂ ಸಮಾಜದ ಅಭಿವೃದ್ಧಿಗೆ ಪ್ರಮುಖ ಸಾಧನವಾಗಿದೆ ಎಂದು ಹೇಳಿದರು.
ಅಭಿವೃದ್ಧಿ ಸಮಿತಿ ಸದಸ್ಯರಾದ ಉಮೇಶ್ ಮಾತನಾಡಿ, ವಿದ್ಯಾರ್ಥಿಗಳ ಪ್ರತಿಭೆ ಹಾಗೂ ಕೌಶಲ್ಯಗಳನ್ನು ಬೆಳೆಸಲು ಪೋಷಕರು, ಶಿಕ್ಷಕರು ಹಾಗೂ ಸಮಾಜದ ಎಲ್ಲರೂ ಪ್ರೋತ್ಸಾಹ ನೀಡಬೇಕು. ಉತ್ತಮ ಶಿಕ್ಷಣದ ಮೂಲಕ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಜೊತೆಗೆ ದೇಶದ ಭವಿಷ್ಯವನ್ನೂ ರೂಪಿಸಬೇಕು ಎಂದು ತಿಳಿಸಿದರು.
ಕಾರ್ಯಕ್ರಮವನ್ನು ರಾಜ್ಯಶಾಸ್ತ್ರ ಉಪನ್ಯಾಸಕರಾದ ಭಾಸ್ಕರ್ ನಿರೂಪಿಸಿ ನಿರ್ವಹಿಸಿದರು. ಕಾರ್ಯಕ್ರಮದಲ್ಲಿ ಪ್ರಮುಖರು ಮತ್ತು ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.











