ಸಾಗರ (ಆನಂದಪುರ): ಸಮೀಪದ ಗೌತಮಪುರದ ವಿದ್ಯಾಭಾರತಿ ಆಂಗ್ಲ ಮಾಧ್ಯಮ ಹಾಗೂ ಜಿ.ಆರ್. ಮೆಮೋರಿಯಲ್ ಹೈಸ್ಕೂಲ್ ವತಿಯಿಂದ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮವನ್ನು ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮವನ್ನು ಗೌತಮಪುರ ಗ್ರಾಮ ಪಂಚಾಯಿತಿಯ ಪಿಡಿಒ ಶ್ರೀ ಕೃಷ್ಣಪ್ಪ ಉದ್ಘಾಟಿಸಿ ಮಾತನಾಡಿ, ಯಾವುದೇ ಹಬ್ಬವನ್ನು ಆಚರಿಸುವ ಮೊದಲು ಅದರ ಮಹತ್ವ ಹಾಗೂ ಹಿನ್ನೆಲೆಯನ್ನು ಅರಿತುಕೊಳ್ಳುವುದು ಅಗತ್ಯವಾಗಿದೆ. ಮಕ್ಕಳಿಗೆ ಶಿಕ್ಷಣದ ಜೊತೆಗೆ ನಮ್ಮ ಸಂಸ್ಕೃತಿ, ಪರಂಪರೆ ಹಾಗೂ ಧರ್ಮಗ್ರಂಥಗಳ ಕುರಿತು ಅರಿವು ಮೂಡಿಸುವುದು ಮುಖ್ಯ. ಮಕ್ಕಳ ಸಮಗ್ರ ಬೆಳವಣಿಗೆಯಲ್ಲಿ ಶಿಕ್ಷಕರ ಜೊತೆಗೆ ಪೋಷಕರ ಪಾತ್ರವೂ ಮಹತ್ವದ್ದಾಗಿದೆ ಎಂದು ತಿಳಿಸಿದರು.

ಶಾಲೆಯ ಸಂಸ್ಥಾಪಕರಾದ ನಾಗರತ್ನ ಮಾತನಾಡಿ, ಮಕ್ಕಳಿಗೆ ಶಿಕ್ಷಣದ ಜೊತೆಗೆ ನಮ್ಮ ಸಂಸ್ಕೃತಿ, ಪರಂಪರೆ ಹಾಗೂ ಹಬ್ಬಗಳ ಮಹತ್ವವನ್ನು ತಿಳಿಸಿಕೊಡುವ ಉದ್ದೇಶದಿಂದ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಕೃಷ್ಣನ ಆದರ್ಶಗಳು ಹಾಗೂ ಮೌಲ್ಯಗಳನ್ನು ಮಕ್ಕಳ ಜೀವನದಲ್ಲಿ ಅಳವಡಿಸಿಕೊಳ್ಳಲು ಇಂತಹ ಆಚರಣೆಗಳು ಪ್ರೇರಣೆಯಾಗಲಿ ಎಂದು ಆಶಿಸಿದರು.
ಶಾಲೆಯ ಮಕ್ಕಳು ವಿಶೇಷವಾಗಿ ಕೃಷ್ಣ ಹಾಗೂ ರಾಧೆಯ ವೇಷವನ್ನು ಧರಿಸಿದ್ದರು.ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರಾದ ಸುನೀತಾ ಹೆಗಡೆ, ಶಿಕ್ಷಕರು ಹಾಗೂ ಪೋಷಕರು ಉಪಸ್ಥಿತರಿದ್ದರು.











