ಶಿವಮೊಗ್ಗ: ನಗರದ ಬಿ.ಎಚ್. ರಸ್ತೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ 2026–27ನೇ ಸಾಲಿನ ಸಾಂಸ್ಕೃತಿಕ, ಕ್ರೀಡೆ, ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್), ಎನ್ಸಿಸಿ, ರೇಂಜರ್ಸ್ ಹಾಗೂ ವಿವಿಧ ವೇದಿಕೆಗಳ ಉದ್ಘಾಟನಾ ಸಮಾರಂಭ ಮಂಗಳವಾರ ನಡೆಯಿತು.
ಕಾರ್ಯಕ್ರಮವನ್ನು ವಿಧಾನಪರಿಷತ್ ಸದಸ್ಯರಾದ ಬಲ್ಕಿಸ್ ಬಾನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿನಿಯರು ಸರ್ಕಾರ ನೀಡುತ್ತಿರುವ ಶಿಕ್ಷಣ ಹಾಗೂ ವಿವಿಧ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು. ಶಿಕ್ಷಣದ ಜೊತೆಗೆ ಅಗತ್ಯ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು. ಕಾಲೇಜಿಗೆ ಹೆಚ್ಚಿನ ಕೋರ್ಸ್ಗಳನ್ನು ತರಲು ಪ್ರಯತ್ನಿಸಲಾಗುವುದು. ಭವಿಷ್ಯದಲ್ಲಿ ಈ ಕಾಲೇಜಿಗೆ ಉತ್ತಮ ಅವಕಾಶಗಳಿವೆ ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಶಾಸಕ ಚನ್ನಬಸಪ್ಪ ಮಾತನಾಡಿ, ಕಾಲೇಜಿಗೆ ನಿವೇಶನ ಮಂಜೂರಾಗಿದ್ದು, ಶೀಘ್ರದಲ್ಲೇ ಕಟ್ಟಡ ನಿರ್ಮಾಣ ಕಾರ್ಯ ಪ್ರಾರಂಭಿಸಲಾಗುವುದು. ವಿದ್ಯಾರ್ಥಿನಿಯರು ಶ್ರಮವಹಿಸಿ ವಿದ್ಯಾಭ್ಯಾಸ ಮಾಡುವುದರ ಜೊತೆಗೆ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು. ನಗರದಲ್ಲೇ ಅತ್ಯುತ್ತಮ ಕಾಲೇಜಾಗಿ ಇದು ಹೊರಹೊಮ್ಮುವಂತೆ ಉತ್ತಮ ಕಟ್ಟಡ ನಿರ್ಮಾಣಕ್ಕೆ ಅಗತ್ಯ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು.
ಮಹಾನಗರ ಪಾಲಿಕೆಯ ಆಯುಕ್ತರಾದ ಮಾಯಣ್ಣ ಗೌಡ ಮಾತನಾಡಿ, ವಿದ್ಯಾರ್ಥಿಗಳು ಸಕಾರಾತ್ಮಕವಾಗಿ ಚಿಂತಿಸುವುದರ ಜೊತೆಗೆ ಉತ್ತಮ ಗುರಿಯನ್ನು ಹೊಂದಬೇಕು. ಉತ್ತಮವಾಗಿ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಸೃಜನಶೀಲತೆ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸಿಕೊಂಡು ಸ್ಪರ್ಧಾತ್ಮಕ ಯುಗಕ್ಕೆ ತಕ್ಕಂತೆ ಸಿದ್ಧರಾಗಬೇಕು. ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ. ರಂಗನಾಥ್ ರಾವ್ ಎಚ್. ಕರಾಡ್ ವಹಿಸಿದ್ದರು. ಸಾಂಸ್ಕೃತಿಕ ವೇದಿಕೆಯ ಸಂಚಾಲಕರಾದ ಹಾಗೂ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಜಗದೀಶ್ ಬಿದರಕೊಪ್ಪ ಅವರು ಪ್ರಾಸ್ತಾವಿಕ ಹಾಗೂ ಸ್ವಾಗತ ಭಾಷಣ ಮಾಡಿದರು.ಸಮಾರಂಭದಲ್ಲಿ ಅಧ್ಯಾಪಕರಾದ ಡಾ. ನಯಾಜ್ ಅಹ್ಮದ್, ಡಾ. ವರದರಾಜ ಎಸ್., ಡಾ. ನವೀನ್, ಮಹೇಂದ್ರ ಜಿ., ಉಮಾಶಂಕರ್ ಓ.ಎಂ. ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ 2025–26ನೇ ಸಾಲಿನಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿನಿಯರನ್ನು ಗೌರವಿಸಲಾಯಿತು. ಅಲ್ಲದೆ ಸಾಂಸ್ಕೃತಿಕ, ಕ್ರೀಡೆ ಹಾಗೂ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿನಿಯರಿಗೆ ಬಹುಮಾನ ವಿತರಿಸಲಾಯಿತು. ವಿದ್ಯಾರ್ಥಿಗಳಿಗೆ ಕೌಶಲ್ಯ ಜಾಬ್ ಕಾರ್ಡ್ಗಳನ್ನು ಸಹ ವಿತರಿಸಲಾಯಿತು.ವಿದ್ಯಾರ್ಥಿನಿಯರಾದ ಚಂದನ ಮತ್ತು ಕೀರ್ತನ ಕಾರ್ಯಕ್ರಮವನ್ನು ನಿರೂಪಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ಕೊಟ್ರೇಶಪ್ಪ ಅವರು ವಂದನಾರ್ಪಣೆ ಸಲ್ಲಿಸಿದರು.











