Home Blog ಜನರ ಸಮಸ್ಯೆಗಳನ್ನು ಆಲಿಸಿ ಸ್ಥಳದಲ್ಲೇ ಪರಿಹಾರ ಕಲ್ಪಿಸುವ ಆಶಯ: ಮಧು ಬಂಗಾರಪ್ಪ..!!

ಜನರ ಸಮಸ್ಯೆಗಳನ್ನು ಆಲಿಸಿ ಸ್ಥಳದಲ್ಲೇ ಪರಿಹಾರ ಕಲ್ಪಿಸುವ ಆಶಯ: ಮಧು ಬಂಗಾರಪ್ಪ..!!

30
0

ಸಾಗರದಲ್ಲಿ ಪ್ರಜಾಸೇವಾ ಆಂದೋಲನಕ್ಕೆ ಚಾಲನೆ..!!

✒️..ಅಮಿತ್ ಆರ್ ಆನಂದಪುರ

ಸಾಗರ: ಸರ್ಕಾರ ರೂಪಿಸಿ ಅನುಷ್ಠಾನಗೊಳಿಸುವ ಜನಪರ ಯೋಜನೆಗಳನ್ನು ಅರ್ಹ ಫಲಾನುಭವಿಗಳ ಮನೆ ಬಾಗಿಲಿಗೆ ತಲುಪಿಸುವುದು ಹಾಗೂ ಜನರ ಸಮಸ್ಯೆಗಳನ್ನು ಆಲಿಸಿ ಸ್ಥಳದಲ್ಲಿಯೇ ಪರಿಹಾರ ಒದಗಿಸುವುದು ಪ್ರಜಾಸೇವಾ ಆಂದೋಲನದ ಮುಖ್ಯ ಉದ್ದೇಶವಾಗಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಹೇಳಿದರು.

ಸಾಗರದ ಗಾಂಧಿ ಮೈದಾನದಲ್ಲಿ ಸೋಮವಾರ ನಡೆದ ಸಾಗರ ತಾಲೂಕು ಮಟ್ಟದ ಪ್ರಜಾಸೇವಾ ಆಂದೋಲನ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಆಡಳಿತ ಯಂತ್ರಕ್ಕೆ ಚುರುಕು ನೀಡುವುದರ ಜೊತೆಗೆ ಗ್ರಾಮೀಣ ಜನರ ಜ್ವಲಂತ ಸಮಸ್ಯೆಗಳಿಗೆ ತ್ವರಿತ ಪರಿಹಾರ ಒದಗಿಸುವುದು ಕಾರ್ಯಕ್ರಮದ ಉದ್ದೇಶವಾಗಿದೆ. ಇದರಿಂದ ಸ್ಥಳೀಯ ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದನೆ ದೊರೆತು ನೆಮ್ಮದಿಯ ಬದುಕಿಗೆ ಸಹಕಾರಿಯಾಗಲಿದೆ ಎಂದರು.

ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಉಪಸ್ಥಿತಿಯಲ್ಲಿ ಪ್ರಜಾಸೇವಾ ಆಂದೋಲನ ಸಭೆಗಳು ನಡೆಯಲಿವೆ. ಈ ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಇದೇ ರೀತಿಯ ‘ಜನಸ್ಪಂದನ’ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಆ ಸಂದರ್ಭದಲ್ಲಿ ಸಾವಿರಾರು ಜನರಿಗೆ ವಿವಿಧ ಸೇವೆ ಮತ್ತು ಸೌಲಭ್ಯಗಳನ್ನು ಒದಗಿಸಲಾಗಿತ್ತು. ಇದೀಗ ಪ್ರಜಾಸೇವಾ ಕಾರ್ಯಕ್ರಮದ ಅನುಷ್ಠಾನಕ್ಕಾಗಿ ರಾಜ್ಯಮಟ್ಟದಲ್ಲಿ ಪ್ರತ್ಯೇಕ ಇಲಾಖೆಯನ್ನು ರಚಿಸಲಾಗಿದೆ. ಸಭೆಯಲ್ಲಿ ಸ್ವೀಕರಿಸುವ ಅರ್ಜಿಗಳನ್ನು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ ಮಾಡಲಾಗುವುದು ಎಂದು ಹೇಳಿದರು.

ಪ್ರಾದೇಶಿಕವಾಗಿ ಎದುರಾಗುತ್ತಿರುವ ಜ್ವಲಂತ ಸಮಸ್ಯೆಗಳು ಸರ್ಕಾರದ ಗಮನಕ್ಕೆ ಬರುವುದರ ಜೊತೆಗೆ ಅವುಗಳಿಗೆ ಶಾಶ್ವತ ಪರಿಹಾರ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಲು ಈ ಕಾರ್ಯಕ್ರಮ ಸಹಕಾರಿಯಾಗಲಿದೆ ಎಂದರು.

1,250 ಕೆಪಿಎಸ್ ಶಾಲೆಗಳ ಆರಂಭ

ದೇಶದ ಉಜ್ವಲ ಭವಿಷ್ಯ ಮತ್ತು ಪ್ರಗತಿ ಮಕ್ಕಳ ಮೇಲೆ ಅವಲಂಬಿತವಾಗಿದೆ. ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಣ ಸಚಿವನಾಗಿ ಶಕ್ತಿ ಮೀರಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವುದಾಗಿ ಮಧು ಬಂಗಾರಪ್ಪ ಹೇಳಿದರು.

ರಾಜ್ಯದಾದ್ಯಂತ 1,250 ಕರ್ನಾಟಕ ಪಬ್ಲಿಕ್ ಶಾಲೆ (ಕೆಪಿಎಸ್)ಗಳನ್ನು ಆರಂಭಿಸಲು ಉದ್ದೇಶಿಸಲಾಗಿದೆ. 2026ರ ಡಿಸೆಂಬರ್ ಅಂತ್ಯದೊಳಗೆ ಅವುಗಳನ್ನು ಉದ್ಘಾಟಿಸುವಂತೆ ಮುಖ್ಯಮಂತ್ರಿ ಅವರಿಗೆ ಮನವಿ ಮಾಡಲಾಗಿದೆ. ಯೋಜನೆಗೆ ಸುಮಾರು ₹4,300 ಕೋಟಿ ವೆಚ್ಚ ಮಾಡಲಾಗುತ್ತಿದೆ ಎಂದರು.

ಒಂದೇ ಶಾಲಾ ಆವರಣದಲ್ಲಿ ಒಂದನೇ ತರಗತಿಯಿಂದ ಪದವಿಪೂರ್ವ ಶಿಕ್ಷಣದವರೆಗೆ ಉಚಿತ ಶಿಕ್ಷಣ ದೊರೆಯಲಿದೆ. ಮೂಲಸೌಕರ್ಯಗಳ ಜೊತೆಗೆ ಅಗತ್ಯ ಸಂಖ್ಯೆಯ ಶಿಕ್ಷಕರ ನೇಮಕಾತಿಗೂ ಕ್ರಮ ಕೈಗೊಳ್ಳಲಾಗುತ್ತಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಉಚಿತ ಬಸ್ ಸಂಪರ್ಕ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ತಿಳಿಸಿದರು.

ಸರ್ಕಾರದ ಸೇವೆ ಕಚೇರಿಗಳಿಗೆ ಸೀಮಿತವಾಗಬಾರದು: ಬೇಳೂರು

ಶಾಸಕ ಬೇಳೂರು ಗೋಪಾಲಕೃಷ್ಣ ಮಾತನಾಡಿ, ಸರ್ಕಾರದ ಸೇವೆ ಕಚೇರಿಗಳಿಗೆ ಮಾತ್ರ ಸೀಮಿತವಾಗದೆ ಸರ್ಕಾರದ ಯೋಜನೆಗಳು ಜನರಿಗೆ ತಲುಪಿ ಅವರ ಬದುಕಿನಲ್ಲಿ ಬದಲಾವಣೆ ತರುವಂತಿರಬೇಕು. ಪ್ರಜಾಸೇವಾ ಆಂದೋಲನದ ಮೂಲಕ ಸರ್ಕಾರ ಜನರ ಸಮಸ್ಯೆಗಳಿಗೆ ಕಿವಿಯಾಗಲಿದೆ ಎಂದರು.

ವಸತಿ ರಹಿತರಿಗೆ ನಿವೇಶನ ಒದಗಿಸಿ ಸ್ವಂತ ಸೂರು ನಿರ್ಮಿಸಿಕೊಳ್ಳಲು ಪ್ರತಿ ಜಿಲ್ಲೆಗೆ 50 ಸಾವಿರ ನಿವೇಶನಗಳನ್ನು ಸೃಜಿಸುವಂತೆ ಸೂಚಿಸಿರುವುದು ಸಂತಸದ ಸಂಗತಿಯಾಗಿದೆ. ಸಾಗರ ತಾಲೂಕಿನಲ್ಲಿ ಸುಮಾರು 10 ಸಾವಿರ ನಿವೇಶನಗಳ ಬೇಡಿಕೆ ಬರುವ ಸಾಧ್ಯತೆ ಇದೆ ಎಂದು ಹೇಳಿದರು.

ಸಾಗರವನ್ನು ಬರಪೀಡಿತ ತಾಲೂಕು ಎಂದು ಘೋಷಿಸಲು ಮನವಿ

ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ ವಾಡಿಕೆಗಿಂತ ಕಡಿಮೆ ಪ್ರಮಾಣದ ಮಳೆಯಾಗಿದ್ದು, ನಿರೀಕ್ಷಿತ ಪ್ರಮಾಣದಲ್ಲಿ ಬೆಳೆ ಬಾರದ ಹಿನ್ನೆಲೆಯಲ್ಲಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದ್ದರಿಂದ ಸಾಗರ ತಾಲೂಕನ್ನು ಬರಪೀಡಿತ ತಾಲೂಕು ಎಂದು ಘೋಷಿಸಿ ಅಗತ್ಯ ಸೌಲಭ್ಯ ಹಾಗೂ ಪರಿಹಾರ ಒದಗಿಸಬೇಕು ಎಂದು ಸಭೆಯಲ್ಲಿ ಮನವಿ ಮಾಡಲಾಯಿತು.

ನಾಳೆ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿ ಸಾಗರ ತಾಲೂಕನ್ನು ಬರಪೀಡಿತ ತಾಲೂಕು ಎಂದು ಘೋಷಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವರನ್ನು ಒತ್ತಾಯಿಸಲಾಯಿತು.

ಇದೇ ಸಂದರ್ಭದಲ್ಲಿ ವನ್ಯಜೀವಿ ಸಪ್ತಾಹದ ಅಂಗವಾಗಿ ಆಯೋಜಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಸಭೆಯಲ್ಲಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ., ಅರಣ್ಯಾಧಿಕಾರಿಗಳಾದ ಪ್ರಸನ್ನ ಹಾಗೂ ಪುಟ್ಟಗಾಯತ್ರಿ, ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಬಿ.ಆರ್. ಜಯಂತ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.