ಸಾಗರದಲ್ಲಿ ಸುರಕ್ಷಿತ ಬಚ್ಚಪನ್ ಅಭಿಯಾನಕ್ಕೆ ಚಾಲನೆ; ಮಕ್ಕಳ ಹಕ್ಕುಗಳ ರಕ್ಷಣೆ ಮತ್ತು ಕಾನೂನು ಅರಿವಿಗೆ ಒತ್ತು
ಸಾಗರ: ಮಕ್ಕಳ ರಕ್ಷಣೆ ಕೇವಲ ಪೋಷಕರ ಜವಾಬ್ದಾರಿಯಲ್ಲ, ಸರ್ಕಾರ ಸೇರಿದಂತೆ ಸಮಾಜದ ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರವೀಂದ್ರ ಆರ್. ಹೇಳಿದರು.
ನಗರದ ಸುಭಾಷ್ ನಗರದಲ್ಲಿರುವ ಸರ್ಕಾರಿ ಪ್ರೌಢಶಾಲೆಯ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಸುರಕ್ಷಿತ ಬಚ್ಚಪನ್ ಅಭಿಯಾನವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇಂದಿನ ದಿನಗಳಲ್ಲಿ ಮಕ್ಕಳನ್ನು ವಿವಿಧ ರೀತಿಯಲ್ಲಿ ದಾರಿ ತಪ್ಪಿಸುವ ಪ್ರಯತ್ನಗಳು ನಡೆಯುತ್ತಿವೆ. ಮಕ್ಕಳು ಸಾಮಾಜಿಕ ಜಾಲತಾಣಗಳ ಆಕರ್ಷಣೆಗೆ ಮರುಳಾಗದೆ, ಉತ್ತಮ ಪುಸ್ತಕಗಳನ್ನು ಓದುವ ಮೂಲಕ ಜ್ಞಾನವನ್ನು ವೃದ್ಧಿಸಿಕೊಳ್ಳಬೇಕು. ಸೃಜನಶೀಲ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಮಕ್ಕಳ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟಲು ಪ್ರತಿಯೊಬ್ಬರೂ ಜಾಗೃತರಾಗಿರಬೇಕು. ಪೋಕ್ಸೊ ಕಾಯ್ದೆಯ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಅಗತ್ಯವಾಗಿದೆ. ಬಾಲ್ಯವಿವಾಹ ಸೇರಿದಂತೆ ಮಕ್ಕಳ ಹಕ್ಕುಗಳಿಗೆ ಧಕ್ಕೆಯುಂಟುಮಾಡುವ ಘಟನೆಗಳನ್ನು ತಡೆಯಲು ಕಾನೂನುಬದ್ಧ ಕ್ರಮಗಳನ್ನು ಕೈಗೊಳ್ಳಬೇಕು. ಮಕ್ಕಳ ಸುರಕ್ಷತೆ ಮತ್ತು ಭವಿಷ್ಯದ ರಕ್ಷಣೆಗೆ ಎಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು. ಉತ್ತಮ ಸಮಾಜ ನಿರ್ಮಾಣದಲ್ಲಿ ಮಕ್ಕಳ ಭವಿಷ್ಯ ರೂಪಿಸುವುದು ಮಹತ್ವದ ಪಾತ್ರ ವಹಿಸುತ್ತದೆ ಎಂದು ತಿಳಿಸಿದರು.

ಶಾಲಾ ಹಂತದಲ್ಲೇ ಕಾನೂನು ಅರಿವು ಅಗತ್ಯ
ವಕೀಲರ ಸಂಘದ ಅಧ್ಯಕ್ಷ ಎಂ.ಬಿ. ಗಿರೀಶ್ ಗೌಡ ಮಾತನಾಡಿ, ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಇರಬೇಕು. ಜೀವನವನ್ನು ಸುಧಾರಿಸಿಕೊಳ್ಳಲು ಹಾಗೂ ಹಕ್ಕು ಮತ್ತು ಕರ್ತವ್ಯಗಳನ್ನು ಅರ್ಥಮಾಡಿಕೊಳ್ಳಲು ಸಂವಿಧಾನ ಪ್ರಮುಖ ಪಾತ್ರ ವಹಿಸುತ್ತದೆ. ಶಾಲಾ ಹಂತದಲ್ಲಿಯೇ ಮಕ್ಕಳಿಗೆ ಕಾನೂನಿನ ಅರಿವು ಮೂಡಿಸುವ ಕೆಲಸವಾಗಬೇಕು. ಮಕ್ಕಳನ್ನು ವಿವಿಧ ವಿಧಾನಗಳ ಮೂಲಕ ದಾರಿ ತಪ್ಪಿಸುವ ಪ್ರಯತ್ನಗಳ ಕುರಿತು ಜಾಗೃತಿ ಮೂಡಿಸುವುದು ಅಗತ್ಯ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಸದಾನಂದ ಸ್ವಾಮಿ ಸಿ. ವಹಿಸಿದ್ದರು. ವೇದಿಕೆಯಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (ಎಸ್ಡಿಎಂಸಿ) ಅಧ್ಯಕ್ಷ ಆನಂದ ಬಿಳಿಸಿರಿ, ಮುಖ್ಯಶಿಕ್ಷಕ ಸುಬ್ರಹ್ಮಣ್ಯ ಟಿ.ಪಿ., ಶಿಕ್ಷಣ ಸಂಯೋಜಕ ವಿ.ಟಿ. ಸ್ವಾಮಿ, ಮಕ್ಕಳ ಸಮಿತಿಯ ಶಾರದಾ, ಕಾವ್ಯ ಸಂತೋಷ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಶಿವಮೊಗ್ಗ ನ್ಯಾಯಾಂಗ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ರಕ್ಷಣಾ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಮಕ್ಕಳ ಕಲ್ಯಾಣ ಸಮಿತಿ, ಮಕ್ಕಳ ರಕ್ಷಣಾ ಘಟಕ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಾಗರ ತಾಲೂಕು ನ್ಯಾಯಾಂಗ ಇಲಾಖೆ, ಕಾನೂನು ಸೇವಾ ಸಮಿತಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸಾಗರ ಇವರ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.



