ಸಾಗರ: ಮಕ್ಕಳು ದೇಶದ ಭವಿಷ್ಯವಾಗಿದ್ದು, ಅವರ ರಕ್ಷಣೆ ಮತ್ತು ಸುಂದರ ಬದುಕನ್ನು ರೂಪಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಹಿರಿಯ ನ್ಯಾಯಾಧೀಶ ರಾಘವೇಂದ್ರ ಶೆಟ್ಟಿಗಾರ್ ಹೇಳಿದರು.
ನಗರದ ಎಂ.ಜಿ.ಎನ್. ಪೈ ಪ್ರೌಢಶಾಲೆಯ ಸಭಾಂಗಣದಲ್ಲಿ ಶಿವಮೊಗ್ಗ ನ್ಯಾಯಾಂಗ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ರಕ್ಷಣಾ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಮಕ್ಕಳ ಕಲ್ಯಾಣ ಸಮಿತಿ, ಮಕ್ಕಳ ರಕ್ಷಣಾ ಘಟಕ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ನ್ಯಾಯಾಂಗ ಇಲಾಖೆ, ಕಾನೂನು ಸೇವಾ ಸಮಿತಿ ಹಾಗೂ ಸಾಗರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸಹಯೋಗದಲ್ಲಿ ಆಯೋಜಿಸಿದ್ದ ಸುರಕ್ಷಿತ ಬಚ್ಚಪನ್ ಅಭಿಯಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮಕ್ಕಳಿಗೆ ಜೀವನದ ಕುರಿತು ಸೂಕ್ತ ಮಾರ್ಗದರ್ಶನ ನೀಡುವ ಕೆಲಸ ಪ್ರತಿಯೊಬ್ಬರಿಂದಲೂ ಆಗಬೇಕು. ಮಕ್ಕಳು ಕಾನೂನಿನ ಬಗ್ಗೆ ಸಾಮಾನ್ಯ ಜ್ಞಾನ ಬೆಳೆಸಿಕೊಳ್ಳುವುದರ ಜೊತೆಗೆ ಶಿಕ್ಷಣದೊಂದಿಗೆ ಜೀವನದ ತಿಳುವಳಿಕೆಯನ್ನೂ ಹೊಂದಿರಬೇಕು. ಉತ್ತಮ ಹವ್ಯಾಸಗಳನ್ನು ರೂಢಿಸಿಕೊಳ್ಳಬೇಕು. ಓದಿನ ಜೊತೆಗೆ ಸಾಧಕರ ಜೀವನ ಮತ್ತು ಸಾಧನೆಗಳನ್ನು ತಿಳಿದುಕೊಂಡು ಅವರ ಆದರ್ಶಗಳನ್ನು ಪಾಲಿಸಬೇಕು. ಸಮಾಜದಲ್ಲಿ ವಿಚಾರವಂತರಾಗಿ ತಮ್ಮ ಬದುಕನ್ನು ರೂಪಿಸಿಕೊಳ್ಳಬೇಕು. ಮಕ್ಕಳ ಭವಿಷ್ಯವನ್ನು ಸುಂದರವಾಗಿ ರೂಪಿಸುವಲ್ಲಿ ಎಲ್ಲರೂ ಕೈಜೋಡಿಸಬೇಕು ಎಂದು ತಿಳಿಸಿದರು.

ಮಕ್ಕಳಿಗೆ ಹಿರಿಯರು ಮಾರ್ಗದರ್ಶಕರಾಗಬೇಕು
ವಕೀಲರ ಸಂಘದ ಅಧ್ಯಕ್ಷ ಎಂ.ಬಿ. ಗಿರೀಶ್ ಗೌಡ ಮಾತನಾಡಿ, ಮಕ್ಕಳ ಬದುಕಿಗೆ ಹಿರಿಯರು ಮಾರ್ಗದರ್ಶಕರಾಗಬೇಕು. ಉತ್ತಮ ಪ್ರಜೆಗಳನ್ನು ನಿರ್ಮಿಸುವಲ್ಲಿ ಸಾರ್ವಜನಿಕರ ಪಾತ್ರ ಮಹತ್ವದ್ದಾಗಿದೆ. ಶಿಕ್ಷಕರು ಮತ್ತು ಪೋಷಕರು ಮಕ್ಕಳೊಂದಿಗೆ ಸ್ನೇಹಿತರಂತೆ ವರ್ತಿಸಿ, ಅವರಲ್ಲಿ ಆತ್ಮವಿಶ್ವಾಸ ಮೂಡಿಸುವುದರ ಜೊತೆಗೆ ಆದರ್ಶ ಗುಣಗಳನ್ನು ಬೆಳೆಸಬೇಕು ಎಂದು ಹೇಳಿದರು.
ಮಕ್ಕಳಲ್ಲಿ ಜಾಗೃತಿ ಮೂಡಿಸುವ ಅಭಿಯಾನ
ಶಿಕ್ಷಣ ಸಂಯೋಜಕ ವಿ.ಟಿ. ಸ್ವಾಮಿ ಆಶಯ ನುಡಿಗಳನ್ನಾಡಿ, ಮಕ್ಕಳ ರಕ್ಷಣೆಯ ದೃಷ್ಟಿಯಿಂದ ಸೂಕ್ತ ಮಾರ್ಗದರ್ಶನ ನೀಡುವ ಕೆಲಸ ನಿರಂತರವಾಗಿ ನಡೆಯುತ್ತಿದೆ. ಮಕ್ಕಳಲ್ಲಿ ಜಾಗೃತಿ ಮೂಡಿಸಿ ಅವರನ್ನು ಸರಿಯಾದ ದಾರಿಯಲ್ಲಿ ಕೊಂಡೊಯ್ಯುವ ನಿಟ್ಟಿನಲ್ಲಿ ಸುರಕ್ಷಿತ ಬಚ್ಚಪನ್ ಅಭಿಯಾನ ಪರಿಣಾಮಕಾರಿಯಾಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಖ್ಯ ಶಿಕ್ಷಕ ಶಿವಕುಮಾರ್ ವಹಿಸಿದ್ದರು. ಮಕ್ಕಳ ಸಮಿತಿಯ ಶಾಂತಾ, ಕಾವ್ಯ ಸೇರಿದಂತೆ ಇತರರು ಉಪಸ್ಥಿತರಿದ್ದರು.



