ಶಿವಮೊಗ್ಗ: ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆದ ಬೃಹತ್ ದೆಹಲಿ ಚಲೋ ಪ್ರತಿಭಟನೆಯಲ್ಲಿ ಕರ್ನಾಟಕದಿಂದ ಕಾಂಗ್ರೆಸ್ನ ಸಾವಿರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಕಾರ್ಯಕರ್ತರಿಗೆ ಸುವ್ಯವಸ್ಥಿತ ಪ್ರಯಾಣ ವ್ಯವಸ್ಥೆ, ಊಟ, ತಿಂಡಿ, ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸುವಲ್ಲಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ವಹಿಸಿದ ಜವಾಬ್ದಾರಿ, ಪರಿಶ್ರಮ ಹಾಗೂ ಕಾರ್ಯಕರ್ತರ ಬಗೆಗಿನ ಕಾಳಜಿಗೆ ಕೆಪಿಸಿಸಿ ಸಂಯೋಜಕ ಹಾಗೂ ಅಖಿಲ ಕರ್ನಾಟಕ ಡಿ.ಕೆ. ಶಿವಕುಮಾರ್ ಅಭಿಮಾನಿಗಳ ಸಂಘದ ಜಿಲ್ಲಾಧ್ಯಕ್ಷ ಆರ್. ಮೋಹನ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕಾರ್ಯಕರ್ತರ ಬಗ್ಗೆ ಕಾಳಜಿ ವಹಿಸುವುದು ಯಾವುದೇ ಸಂಸ್ಥೆ, ಪಕ್ಷ ಅಥವಾ ಸಂಘಟನೆಯ ಯಶಸ್ಸಿನ ಮೂಲಾಧಾರವಾಗಿದೆ. ತಳಮಟ್ಟದಲ್ಲಿ ಕೆಲಸ ಮಾಡುವ ಕಾರ್ಯಕರ್ತರನ್ನು ಗೌರವದಿಂದ ಕಾಣುವುದು ಹಾಗೂ ಅವರ ಅಗತ್ಯಗಳಿಗೆ ಸ್ಪಂದಿಸುವುದು ನಾಯಕತ್ವದ ಪ್ರಮುಖ ಜವಾಬ್ದಾರಿಯಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಮತ್ತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾರ್ಯಕರ್ತರೇ ಪಕ್ಷದ ಶಕ್ತಿ ಎಂಬ ನಂಬಿಕೆಯೊಂದಿಗೆ ಕಾರ್ಯಕರ್ತರನ್ನು ಗೌರವಿಸುವ ನಾಯಕರಾಗಿದ್ದಾರೆ.

ಕಾರ್ಯಕರ್ತರೊಂದಿಗೆ ನಿರಂತರ ಸಂಪರ್ಕ ಹೊಂದುವುದು, ಅವರ ಸಮಸ್ಯೆಗಳನ್ನು ಆಲಿಸಿ ಸೂಕ್ತ ಮಾರ್ಗದರ್ಶನ ನೀಡುವುದು, ವೈಯಕ್ತಿಕ ಅಥವಾ ಆರ್ಥಿಕ ಸಂಕಷ್ಟದ ಸಂದರ್ಭಗಳಲ್ಲಿ ಬೆಂಬಲಕ್ಕೆ ನಿಲ್ಲುವುದು, ಅವರ ನಿಸ್ವಾರ್ಥ ಸೇವೆ ಹಾಗೂ ಕಠಿಣ ಪರಿಶ್ರಮವನ್ನು ಗುರುತಿಸಿ ಸಾರ್ವಜನಿಕವಾಗಿ ಗೌರವಿಸುವುದು, ತರಬೇತಿ ಮತ್ತು ಮಾರ್ಗದರ್ಶನದ ಮೂಲಕ ಮುಂದಿನ ದಿನಗಳಲ್ಲಿ ನಾಯಕತ್ವದ ಜವಾಬ್ದಾರಿ ವಹಿಸಿಕೊಳ್ಳಲು ಪ್ರೋತ್ಸಾಹಿಸುವಂತಹ ಕಾರ್ಯಗಳನ್ನು ಬಿ.ಕೆ. ಹರಿಪ್ರಸಾದ್ ಮತ್ತು ಡಿ.ಕೆ. ಶಿವಕುಮಾರ್ ಅವರು ನಿರಂತರವಾಗಿ ಮಾಡುತ್ತಾ ಬಂದಿದ್ದಾರೆ.
ಇವರ ಮುಂದಾಳತ್ವ ಹಾಗೂ ನಾಯಕತ್ವದಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಸಂಘಟನಾತ್ಮಕವಾಗಿ ಬಲಿಷ್ಠವಾಗುತ್ತಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಮುಂಬರುವ 2028ರ ವಿಧಾನಸಭೆ ಮತ್ತು 2029ರ ಲೋಕಸಭೆ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷ ಉತ್ತಮ ಸಾಧನೆ ಮಾಡಲಿದೆ ಎಂಬ ವಿಶ್ವಾಸವಿದೆ ಎಂದು ಆರ್. ಮೋಹನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.











