ಶಿವಮೊಗ್ಗ: ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ವಿಮಾನ ಸೇವೆ ಸ್ಥಗಿತಗೊಂಡಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು, ವಿಮಾನ ಸೇವೆಯನ್ನೇ ಮುಂದುವರಿಸಲು ಸಾಧ್ಯವಾಗದಿದ್ದರೆ ವಿಮಾನ ನಿಲ್ದಾಣವನ್ನು ಬಂದ್ ಮಾಡಿ, ಅದಕ್ಕಾಗಿ ಭೂಮಿ ನೀಡಿದ ರೈತರಿಗೆ ಅವರ ಜಮೀನನ್ನು ಹಿಂದಿರುಗಿಸಲಿ ಎಂದು ಕಿಡಿಕಾರಿದ್ದಾರೆ.
ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಲೆನಾಡಿನ ಜನರಿಗೆ ವಿಮಾನ ಸೇವೆಯೂ ಬೇಡ, ವಿಮಾನ ನಿಲ್ದಾಣವೂ ಬೇಡ ಎನ್ನುವ ಪರಿಸ್ಥಿತಿ ನಿರ್ಮಾಣವಾಗಬಾರದು. ಸಾರ್ವಜನಿಕರ ಅನುಕೂಲ ಹಾಗೂ ಅಭಿವೃದ್ಧಿಯ ದೃಷ್ಟಿಯಿಂದ ರೈತರು ತಮ್ಮ ಅಮೂಲ್ಯ ಭೂಮಿಯನ್ನು ನೀಡಿದ್ದಾರೆ. ಆದರೆ, ಇದೀಗ ವಿಮಾನ ಹಾರಾಟವೇ ಸ್ಥಗಿತಗೊಂಡಿರುವುದು ಸರಿಯಲ್ಲ. ಸೇವೆ ಮುಂದುವರಿಸಲು ಸಾಧ್ಯವಾಗದಿದ್ದರೆ ರೈತರಿಗೆ ಭೂಮಿ ಹಿಂದಿರುಗಿಸಿ ವಿಮಾನ ನಿಲ್ದಾಣವನ್ನು ಬಂದ್ ಮಾಡಲಿ ಎಂದು ಆಗ್ರಹಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರೇ ಉದ್ಘಾಟಿಸಿರುವ ವಿಮಾನ ನಿಲ್ದಾಣದಲ್ಲಿ ವಿಮಾನ ಸೇವೆ ಸ್ಥಗಿತಗೊಂಡಿರುವುದು ಅವರಿಗೂ ಮುಜುಗರ ಉಂಟುಮಾಡುವ ಸಂಗತಿಯಾಗಿದೆ. ಕನಿಷ್ಠ ಗೌರವದ ದೃಷ್ಟಿಯಿಂದಲಾದರೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಟ್ಟಾಗಿ ಕಾರ್ಯನಿರ್ವಹಿಸಿ ವಿಮಾನ ಸೇವೆ ಮುಂದುವರಿಸಬೇಕು. ಈ ವಿಚಾರದಲ್ಲಿ ಕ್ರಮ ಕೈಗೊಳ್ಳುವುದಾಗಿ ಕೈಗಾರಿಕಾ ಸಚಿವರು ಭರವಸೆ ನೀಡಿದ್ದಾರೆ. ಮುಂದಿನ ಹಂತದಲ್ಲಿ ಸಂಬಂಧಪಟ್ಟವರು ವಿಮಾನ ಸೇವೆ ಪುನರಾರಂಭಿಸುವ ಜವಾಬ್ದಾರಿ ನಿರ್ವಹಿಸಬೇಕು ಎಂದರು.

ಕಲಬುರಗಿ ಮತ್ತು ಬೀದರ್ ವಿಮಾನ ನಿಲ್ದಾಣಗಳಿಗೆ ರಾಜ್ಯ ಸರ್ಕಾರ ತಲಾ 16 ಕೋಟಿ ರೂ. ಅನುದಾನ ನೀಡಿದೆ. ಆದರೆ, ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಜ್ಯ ಸರ್ಕಾರದಿಂದ ಅನುದಾನ ನೀಡಲಾಗಿದೆಯೇ ಎಂಬ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಬೇಳೂರು, ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ 10 ಕೋಟಿ ರೂ. ಅನುದಾನ ನೀಡಲಾಗಿದ್ದು, ಇದರಲ್ಲಿ 5 ಕೋಟಿ ರೂ. ಬಿಡುಗಡೆಯಾಗಿದೆ. ಉಳಿದ 5 ಕೋಟಿ ರೂ. ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಎಂದು ತಿಳಿಸಿದರು.
ಇದೇ ವೇಳೆ ಶಿವಮೊಗ್ಗ ವಿಮಾನ ಸೇವೆ ಸ್ಥಗಿತಕ್ಕೆ ಕಾರಣ ತಿಳಿಸಿದ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥ ಗೌಡ, ಶಿವಮೊಗ್ಗದಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಇಂಡಿಗೋ ವಿಮಾನ ಸೇವೆ ಸ್ಥಗಿತಗೊಳ್ಳಲು ಕೇಂದ್ರ ಸರ್ಕಾರ ಪ್ರಸ್ತಾಪಿಸಿರುವ ಪೈಲಟ್ಗಳ ಲ್ಯಾಂಡಿಂಗ್ ಮಿತಿಗೆ ಸಂಬಂಧಿಸಿದ ಹೊಸ ನಿಯಮವೇ ಪ್ರಮುಖ ಕಾರಣ ಎಂದು ಹೇಳಿದರು.











