Home Shivamogga Sagara ಆನಂದಪುರ ಹೋಬಳಿ ಮಟ್ಟದ ಪ್ರಜಾ ಸೇವಾ ಆಂದೋಲನ; ಸದುಪಯೋಗ ಪಡೆದುಕೊಳ್ಳಿ: ಚೇತನ್ ರಾಜ್ ಕಣ್ಣೂರು..!!

ಆನಂದಪುರ ಹೋಬಳಿ ಮಟ್ಟದ ಪ್ರಜಾ ಸೇವಾ ಆಂದೋಲನ; ಸದುಪಯೋಗ ಪಡೆದುಕೊಳ್ಳಿ: ಚೇತನ್ ರಾಜ್ ಕಣ್ಣೂರು..!!

0
22

✒️...ಅಮಿತ್ ಆರ್ ಆನಂದಪುರ

ಅ. 17ರಂದು ಕಡ್ಲೆಹಂಕ್ಲು ಮಾರಿಕಾಂಬ ದೇವಸ್ಥಾನದ ಆವರಣದಲ್ಲಿ ಕಾರ್ಯಕ್ರಮ

ಸಾಗರ(ಆನಂದಪುರ): ಸಾರ್ವಜನಿಕರ ಅಹವಾಲುಗಳಿಗೆ ಸ್ಪಂದಿಸಿ, ಸರ್ಕಾರಿ ಸೌಲಭ್ಯಗಳನ್ನು ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪ್ರಜಾ ಸೇವಾ ಆಂದೋಲನ ಇದೀಗ ಆನಂದಪುರ ಹೋಬಳಿ ಮಟ್ಟದಲ್ಲಿ ನಡೆಯಲಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕಾಂಗ್ರೆಸ್ ಮುಖಂಡ ಚೇತನ್ ರಾಜ್ ಕಣ್ಣೂರು ಮನವಿ ಮಾಡಿದರು.

ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವುದು ಹಾಗೂ ಆಡಳಿತದಲ್ಲಿ ಪಾರದರ್ಶಕತೆ ಹೆಚ್ಚಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಪ್ರಜಾ ಸೇವಾ ಆಂದೋಲನದ ಮೂಲಕ ಜನರಿಗೆ ಸೇವೆ ಒದಗಿಸಲು ಮುಂದಾಗಿದೆ. ಸಚಿವ ಮಧು ಬಂಗಾರಪ್ಪ ಹಾಗೂ ಶಾಸಕ ಗೋಪಾಲಕೃಷ್ಣ ಬೇಳೂರು ಅವರ ನೇತೃತ್ವದಲ್ಲಿ ಶಿವಮೊಗ್ಗ ಜಿಲ್ಲಾ ಮತ್ತು ಸಾಗರ ತಾಲೂಕು ಮಟ್ಟದಲ್ಲಿ ನಡೆದ ಪ್ರಜಾ ಸೇವಾ ಆಂದೋಲನ ಯಶಸ್ವಿಯಾಗಿದೆ ಎಂದರು.

ಸರ್ಕಾರಿ ಸೌಲಭ್ಯಗಳು ಮತ್ತು ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ ತಲುಪಿಸುವ ನಿಟ್ಟಿನಲ್ಲಿ ಆನಂದಪುರ ಹೋಬಳಿಯ ಎಂಟು ಗ್ರಾಮ ಪಂಚಾಯಿತಿಗಳನ್ನು ಒಳಗೊಂಡಂತೆ ಅಕ್ಟೋಬರ್ 17ರ ಶನಿವಾರ ಕಡ್ಲೆಹಂಕ್ಲು ಮಾರಿಕಾಂಬ ದೇವಸ್ಥಾನದ ಆವರಣದಲ್ಲಿ ಪ್ರಜಾ ಸೇವಾ ಆಂದೋಲನ ಆಯೋಜಿಸಲಾಗಿದೆ. ಶಾಸಕ ಗೋಪಾಲಕೃಷ್ಣ ಬೇಳೂರು ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.

ಸಾರ್ವಜನಿಕರು ತಮ್ಮ ಸಮಸ್ಯೆಗಳು ಹಾಗೂ ಅಹವಾಲುಗಳನ್ನು ಲಿಖಿತ ರೂಪದಲ್ಲಿ ಸಿದ್ಧಪಡಿಸಿಕೊಂಡು ಕಾರ್ಯಕ್ರಮಕ್ಕೆ ಹಾಜರಾಗಬೇಕು. ಸಂಬಂಧಪಟ್ಟ ಅಧಿಕಾರಿಗಳ ಬಳಿ ತಮ್ಮ ಅಹವಾಲುಗಳನ್ನು ನೋಂದಾಯಿಸಿ, ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಬೇಕು. ಈ ಕಾರ್ಯಕ್ರಮದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು, ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಇದರಿಂದ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ನೇರವಾಗಿ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರ ಕಂಡುಕೊಳ್ಳಲು ಅನುಕೂಲವಾಗಲಿದೆ ಎಂದು ಹೇಳಿದರು.

ಸರ್ಕಾರಿ ಕಚೇರಿಗಳಿಗೆ ಅಲೆದಾಡುವ ಬದಲು ಜನರ ಬಳಿಗೇ ಬಂದಿರುವ ಈ ಸೇವಾ ಕಾರ್ಯಕ್ರಮವನ್ನು ಸಾರ್ವಜನಿಕರು ಸಮರ್ಪಕವಾಗಿ ಬಳಸಿಕೊಂಡು ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಚೇತನ್ ರಾಜ್ ಕಣ್ಣೂರು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮುಖಂಡರಾದ ಗಜೇಂದ್ರ ಯಾದವ್,ರಮಾನಂದ ಸಾಗರ್, ಉಮೇಶ್, ಕಲೀಮ್ ಉಲ್ಲಾಖಾನ್, ಬಾಬುಲ್ ಸಾಬ್ರು , ಲಿಂಗರಾಜ್, ಆನಂದ ಹರಟೆ, ಬಸವರಾಜ್, ಎಂ ಎಲ್ ಈಶ್ವರ, ರಜಾಕ್ ,ಕಿರಣ್ ದೊಡ್ಮನೆ, ಅಶ್ವಿನ್ ಹಾಗೂ ಆಸಿಫ್ ಉಪಸ್ಥಿತರಿದ್ದರು.

NO COMMENTS